Mon. Nov 23rd, 2026

ರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

Share this with Friends

ರಾಮನಗರ: ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 4,500 ಕೋಟಿ ವೆಚ್ಚದಲ್ಲಿ ಒಟ್ಟು 1,350 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರದ ಕೂಟಗಲ್ ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ಸೋಮವಾರ ನೂತನ ಕೆಪಿಎಸ್ ಶಾಲೆ ಹಾಗೂ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರ ನೇತೃತ್ವದಲ್ಲಿ 50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗೆ ಸರಿಸಮನಾದ ಆಧುನಿಕ ಶಿಕ್ಷಣ: ಕೆಪಿಎಸ್ ಶಾಲೆಗಳಲ್ಲಿ ಒಂದೇ ಸೂರಿನಡಿ ಎಲ್‌ಕೆಜಿಯಿಂದ ಪಿಯುಸಿವರೆಗೆ 14 ವರ್ಷಗಳ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದೆ. ಇಲ್ಲಿ ಪ್ರತಿ ವಿಷಯಕ್ಕೂ ಪ್ರತ್ಯೇಕ ಶಿಕ್ಷಕರಿದ್ದು, ದ್ವಿಭಾಷಾ ನೀತಿ ಜಾರಿಯಲ್ಲಿರಲಿದೆ. ಒಂದನೇ ತರಗತಿಯಿಂದ ಕಂಪ್ಯೂಟರ್, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಆರನೇ ತರಗತಿಯಿಂದ ವೃತ್ತಿ ಶಿಕ್ಷಣವನ್ನು ಕಲಿಸಲಾಗುವುದು. ಜೊತೆಗೆ, ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತ ಬಸ್ ಸೌಲಭ್ಯವನ್ನೂ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಮೂಲಸೌಕರ್ಯದ ಜೊತೆಗೆ ಶಿಕ್ಷಕರ ಕೊರತೆ ನೀಗಿಸಲು ಒಂದೇ ಹಂತದಲ್ಲಿ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದಾಗ ನನಗೆ ಬೇರೆ ಖಾತೆ ಬೇಕೇ ಎಂದು ಕೇಳಿದ್ದರು; ಆದರೆ ನಾನು ಶಿಕ್ಷಣ ಇಲಾಖೆಯನ್ನೇ ಆಯ್ಕೆ ಮಾಡಿಕೊಂಡೆ. ದೇವರನ್ನು ಎರಡನೇ ಸ್ಥಾನದಲ್ಲಿಟ್ಟು ಮಕ್ಕಳ ಭವಿಷ್ಯವನ್ನು ಮೊದಲ ಸ್ಥಾನದಲ್ಲಿಟ್ಟು ಕೆಲಸ ಮಾಡುತ್ತಿದ್ದೇನೆ. ಬಂಗಾರಪ್ಪ ಅವರ ಶಿಷ್ಯರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾರ್ಯನಿರ್ವಹಿಸುತ್ತಿರುವುದು ತಂದೆಯ ಆಡಳಿತದಲ್ಲೇ ಕೆಲಸ ಮಾಡಿದ ತೃಪ್ತಿ ನೀಡುತ್ತಿದೆ ಎಂದು ಸ್ಮರಿಸಿದರು.

ರೈತರ ಬದುಕಿಗೆ ಶಕ್ತಿ ತುಂಬಿದ ಬಂಗಾರಪ್ಪ: ಡಿ.ಕೆ. ಸುರೇಶ್

ಸಮಾರಂಭದಲ್ಲಿ ಮಾತನಾಡಿದ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್, ಸುಮಾರು 35 ವರ್ಷಗಳ ಹಿಂದೆ ಎಸ್. ಬಂಗಾರಪ್ಪ ಅವರು ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು. ಇಂದು ನಮ್ಮ ಸರ್ಕಾರ ಮನೆಗಳಿಗೂ ಉಚಿತ ವಿದ್ಯುತ್ ನೀಡುತ್ತಿದೆ ಎಂದರು. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವ ಕೆಪಿಎಸ್ ಶಾಲೆಗಳ ಸ್ಥಾಪನೆಯು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಲಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ. ಬಾಲಕೃಷ್ಣ, ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಬಮೂಲ್ ಅಧ್ಯಕ್ಷ ಪಿ. ನಾಗರಾಜ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ವಿ. ರಾಜು, ಮಾಜಿ ಎಂಎಲ್‌ಸಿ ಸಿ.ಎಂ. ಲಿಂಗಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 


Share this with Friends

Related Post