ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕಾರ್ಯವೈಖರಿಯನ್ನು ಸುಧಾರಿಸಿ, ಅದನ್ನು ಪಾರದರ್ಶಕ ಹಾಗೂ ವಿಶ್ವಾಸಾರ್ಹ ಸಂಸ್ಥೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಚಿಸಲಾಗಿದ್ದ ವಿಧಾನಸಭೆಯ ಸದನ ಸಮಿತಿಯು ತನ್ನ ಒಮ್ಮತದ ಶಿಫಾರಸುಗಳ ವರದಿಯನ್ನು ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದೆ ಎಂದು ಸಮಿತಿಯ ಸದಸ್ಯ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಕೆಪಿಎಸ್ಸಿ ನಿರಂತರವಾಗಿ ನಕಾರಾತ್ಮಕ ಕಾರಣಗಳಿಂದಲೇ ಸುದ್ದಿಯಲ್ಲಿದೆ. ಆಯೋಗದ ಅಧ್ಯಕ್ಷರು, ಓರ್ವ ಸದಸ್ಯೆ ಹಾಗೂ ಐಎಎಸ್ ಅಧಿಕಾರಿಯೊಬ್ಬರು ಜೈಲು ಸೇರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸಿದೆ. ಇದರಿಂದ ಯುವ ಸಮೂಹದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಡಳಿತ ಯಂತ್ರಕ್ಕೂ ಹಿನ್ನಡೆಯಾಗಿದೆ ಎಂದು ವಿಷಾದಿಸಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ, ಆಯೋಗದ ಸಮಗ್ರ ಅಧ್ಯಯನಕ್ಕಾಗಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಒಟ್ಟು 15 ಸಭೆಗಳನ್ನು ನಡೆಸಿದ್ದು, ರಾಜ್ಯದ ಹಾಲಿ ಮುಖ್ಯ ಕಾರ್ಯದರ್ಶಿ, ನಾಲ್ವರು ನಿವೃತ್ತ ಮುಖ್ಯ ಕಾರ್ಯದರ್ಶಿಗಳು, ಆಯೋಗದ ಮಾಜಿ ಪದಾಧಿಕಾರಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದೆ ಎಂದು ವಿವರಿಸಿದ್ದಾರೆ.
ಅಲ್ಲದೆ, ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಕಾರ್ಯವಿಧಾನವನ್ನೂ ಅಧ್ಯಯನ ಮಾಡಿ, ಕೆಪಿಎಸ್ಸಿಯನ್ನು ಆರೋಗ್ಯಕರ ಸಂಸ್ಥೆಯನ್ನಾಗಿ ಮಾರ್ಪಡಿಸಲು ಅಗತ್ಯವಿರುವ ಶಿಫಾರಸುಗಳನ್ನು ಸಿದ್ಧಪಡಿಸಲಾಗಿದೆ. ಸಮಿತಿಯ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಈ ವರದಿಯನ್ನು ಸ್ಪೀಕರ್ ಅವರಿಗೆ ಹಸ್ತಾಂತರಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳ ಪರವಾಗಿ ಈ ಸುಧಾರಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದು ತೃಪ್ತಿ ತಂದಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

