Wed. Nov 25th, 2026

ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸಲು ಕಾಂಗ್ರೆಸ್ ಹುನ್ನಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ

Share this with Friends

ಕಲಬುರಗಿ: ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ನಡೆಸುವ ಮೂಲಕ ದೇಶದ ಪ್ರಜಾಪ್ರಭುತ್ವ ಹಾಗೂ ಚುನಾವಣಾ ಪ್ರಕ್ರಿಯೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸಲು ಕಾಂಗ್ರೆಸ್ ಪಕ್ಷ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆ ಹಾಗೂ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದು ಭಾರತವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುತ್ತಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚುತ್ತಿರುವುದು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಕಣ್ಣು ಕುಕ್ಕುತ್ತಿದೆ ಎಂದು ಟೀಕಿಸಿದರು.

ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯ:

ರಾಹುಲ್ ಗಾಂಧಿ ಅವರು ಒಂದು ರೀತಿಯಲ್ಲಿ ಅನಿವಾಸಿ ಭಾರತೀಯರಂತಾಗಿದ್ದು (ಎನ್‌ಆರ್‌ಐ), ವಿದೇಶಗಳಿಗೆ ತೆರಳಿ ಭಾರತದ ವಿರುದ್ಧ ಅಪಮಾನಕರವಾಗಿ ಮಾತನಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಪ್ರಧಾನಿಯಾಗಬೇಕೆಂಬ ಅವರ ಹಗಲುಗನಸು ಎಂದಿಗೂ ನನಸಾಗುವುದಿಲ್ಲ. ಪ್ರಧಾನಿ ಮೋದಿ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆದರೆ, ದೇಶದ ಜನರ ಆಶೀರ್ವಾದ ಮೋದಿ ಅವರೊಂದಿಗಿದ್ದು, ಅವರು ಎಲ್ಲಿಗೂ ಹೋಗುವುದಿಲ್ಲ; ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ:

ಸೋಲಿನ ಭೀತಿಯಿಂದ ಕಾಂಗ್ರೆಸ್ ನಾಯಕರು ಇವಿಎಂ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವಾಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ ಕನಿಷ್ಠ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗುವುದು ಖಚಿತ ಎಂದು ಹಿರಿಯ ನಾಯಕ ರಾಜನಾಥ್ ಸಿಂಗ್ ಅವರಿಗೂ ಭರವಸೆ ನೀಡುತ್ತಿದ್ದೇನೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು, ರೈತರ ನಿರ್ಲಕ್ಷ್ಯಕ್ಕೆ ಆಕ್ರೋಶ:

ಚುನಾವಣೆಗೂ ಮುನ್ನ ಆಶಾ ಕಾರ್ಯಕರ್ತೆಯರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಅವುಗಳನ್ನು ಈಡೇರಿಸಲು ಹಿಂದೇಟು ಹಾಕುತ್ತಿದೆ. ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗೆ ಸ್ಪಂದಿಸುವ ಸೌಜನ್ಯವನ್ನೂ ಸರ್ಕಾರ ತೋರುತ್ತಿಲ್ಲ. ಅಲ್ಲದೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದರೂ ಅವರಿಗೆ ನೆರವಾಗುವ ಬದಲು ಅಧಿಕಾರದ ಸ್ವಾರ್ಥ ಮತ್ತು ರಾಜಕೀಯ ಪ್ರಚಾರದಲ್ಲೇ ಮುಳುಗಿರುವ ರಾಜ್ಯ ಸರ್ಕಾರ ರೈತರ ಪಾಲಿಗೆ ಬದುಕಿದ್ದರೂ ಸತ್ತಂತಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

 


Share this with Friends

Related Post