Sat. Nov 2nd, 2024

ಮಹಿಳಾ ಸಬಲೀಕರಣಕ್ಕೆ10 ವರ್ಷಗಳಲ್ಲಿ ಕೇಂದ್ರದಿಂದ ಗರಿಷ್ಠ ಆದ್ಯತೆ:ಭಾರತಿ ಶೆಟ್ಟಿ

Share this with Friends

ಬೆಂಗಳೂರು,ಮಾ.28: ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ತಿಳಿಸಿದರು.

ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 33ರಷ್ಟು ಮಹಿಳಾ ಮೀಸಲಾತಿ, ತ್ರಿವಳಿ ತಲಾಖ್ ರದ್ದು, ಮಹಿಳಾ ಅತ್ಯಾಚಾರ ಮಾಡಿದ ಅಪರಾಧಿಗೆ ಗಲ್ಲು ಶಿಕ್ಷೆ ಸೇರಿ ಅನೇಕ ಕಾನೂನಾತ್ಮಕ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು.

ಮಹಿಳಾ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಮುದ್ರಾ ಯೋಜನೆಯಡಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕೊಡಲಾಗಿದೆ. ಶೇ 61 ಮಹಿಳೆಯರು ಆ ಯೋಜನೆಯ ಪ್ರತಿಫಲ ಪಡೆದಿದ್ದಾರೆ ಎಂದು ತಿಳಿಸಿದರು.

ಶೇ 45 ಮಹಿಳೆಯರು ಸ್ಟಾಂಡ್ ಅಪ್ ಯೋಜನೆಯ ಲಾಭ ಪಡೆದಿದ್ದಾರೆ, ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕಳೆದ 10 ವರ್ಷಗಳಲ್ಲಿ 51.6 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ. ಇದರಲ್ಲಿ 28 ಕೋಟಿ ಮಹಿಳಾ ಖಾತೆಗಳಿವೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಶೇ 70ರಷ್ಟು ಮನೆಗಳನ್ನು ಮಹಿಳೆಯರಿಗೇ ಕೊಡಲಾಗುತ್ತಿದೆ. ವಿಶ್ವಕರ್ಮ ಯೋಜನೆಯಲ್ಲಿ ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಭಾಗೀದಾರರಾಗಿದ್ದಾರೆ. ವಿಶ್ವಕರ್ಮ ಯೋಜನೆಯ ನೋಂದಣಿಯಲ್ಲಿ ನಮ್ಮ ಕರ್ನಾಟಕ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ಸೂಚಿಸಿದರು.

ಜನೌಷಧಿ ಕೇಂದ್ರಗಳಿಂದ ಮಹಿಳೆಯರು ದೊಡ್ಡ ಪ್ರಮಾಣದ ಪ್ರಯೋಜನ ಪಡೆಯುತ್ತಿದ್ದಾರೆ. ಅದರಲ್ಲೂ ಕರ್ನಾಟಕವು ಜನೌಷಧಿ ಕೇಂದ್ರಗಳಲ್ಲಿ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ.

ಮಹಿಳಾ ಸ್ವಸಹಾಯ ಸಂಘಗಳಿಗೆ 1,800 ಕೋಟಿ ರೂ. ಸಾಲವನ್ನು ನರೇಂದ್ರ ಮೋದಿಯವರು ಕೊಟ್ಟಿದ್ದಾರೆ. ಈ ರೀತಿ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ಕೊಟ್ಟ ಪರಿಣಾಮ ಶೇ 50ರಷ್ಟು ಜನರು ಬಡತನ ರೇಖೆಯಿಂದ ಮೇಲೆ ಬಂದುದನ್ನು ಕಾಣಬಹುದು ಎಂದು ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಕರ್ನಾಟಕವು ಮಹಿಳೆಯರ ಸುರಕ್ಷತೆಯಲ್ಲಿ ಹಿಂದುಳಿದಿದೆ. 1.80 ಲಕ್ಷ ಆರ್ಥಿಕ ಅಪರಾಧಗಳು ರಾಜ್ಯದಲ್ಲಿ ನಡೆದಿವೆ. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಯಾವುದೇ ರಕ್ಷಣೆ ಸಿಗುತ್ತಿಲ್ಲ ಎಂದು ಇದೇ‌ ವೇಳೆ ಭಾರತಿ ಶೆಟ್ಟಿ ಆಕ್ರೋಶ‌ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.


Share this with Friends

Related Post