ಮೈಸೂರು, ಫೆ.6: ಐದು ನೂರು ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಚಿವರು,ಸರ್ಕಾರಿ ಶಾಲೆಗಳ ಸುಧಾರಣೆಗೆ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಂದಿನ ವರ್ಷದಿಂದ ಮೈಸೂರಿನ ಸಿ ಎಫ್ ಟಿ ಆರ್ ಐನಿಂದ ಪ್ರಮಾಣಿಕೃತಗೊಂಡಿರುವ ರಾಗಿ ಮಾಲ್ಟನ್ನು ಕ್ಷೀರ ಭಾಗ್ಯ ಯೋಜನೆ ಅಡಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡಲಾಗುವುದು ಎಂದು ತಿಳಿಸಿದರು.
ಶಾಲಾ ಸಮಯದ ನಂತರ ಶಾಲೆಗಳಲ್ಲಿಯೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ನಾನು ಶಿಕ್ಷಣ ಖಾತೆಯನ್ನು ವಹಿಸಿಕೊಂಡ ನಂತರ ಹಲವು ಬದಲಾವಣೆಗಳನ್ನು ತಂದಿದ್ದೇನೆ, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕಗಳ ಹೊರೆಯನ್ನು ತಗ್ಗಿಸುವ ಮುಂದಿನ ಶೈಕ್ಷಣಿಕ ವರ್ಷದಿಂದ ನೋಟ್ ಬುಕ್ ಗಳ ಬದಲಾಗಿ ನೋಟ್ ಶೀಟ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ರಾಜ್ಯದಲ್ಲಿ 52,000 ಶಿಕ್ಷಕರ ಕೊರತೆ ಇದ್ದು ಈಗಾಗಲೇ 12,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು
ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಶೇ. 90ರಷ್ಟು ಯಶಸ್ವಿ ಆಗಿದೆ. ಮುಂದಿನ ಸಂಸತ್ ಚುನಾವಣೆಯಲ್ಲಿ ನಾವು ಗ್ಯಾರೆಂಟಿ ಯೋಜನೆಗಳ ಮೂಲಕ ಮತಯಾಚನೆ ಮಾಡುತ್ತೇವೆ ಎಂದು ಅವರು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ನಿಂದ ಸಂಸದರು ಆಯ್ಕೆಯಾಗಲಿದ್ದಾರೆ, ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಟಾಂಗ್ ನೀಡಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿನ ಬಿಜೆಪಿ ಸಂಸದರು ಅನುದಾನ ತರುವ ಕುರಿತು ಧ್ವನಿ ಎತ್ತದೇ ಇರುವುದರಿಂದ ನಾವು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಕಾರವಾಗಿ ನುಡಿದರು.