Mon. Dec 23rd, 2024

ದೆಹಲಿ ಚಲೋದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಜನಪ್ರತಿನಿಧಿಗಳಿಗೆ ಸಿಎಂ ಪತ್ರ

Share this with Friends

ಬೆಂಗಳೂರು,ಫೆ.6: ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ

ನಾಳೆ ದೆಹಲಿ ಚಲೋಗೆ ನಿರ್ಧರಿಸಿದ್ದು,ಇದರಲ್ಲಿ ಭಾಗವಹಿಸುವಂತೆ
ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅದೇ ರೀತಿ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೂ ಇಂದು ಸಿಎಂ ಪತ್ರ ಬರೆದಿದ್ದಾರೆ.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಇದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಡೆಸುವ ಪ್ರತಿಭಟನೆ ಅಲ್ಲ,ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.

ಹಾಗಾಗಿ ಬಿಜೆಪಿ ಸಂಸದರು ಮತ್ತು ಶಾಸಕರುಗಳಿಗೂ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯ ಮಂತ್ರಿಗಳು, ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್,
ಮಲ್ಲಿಕಾರ್ಜುನ ಖರ್ಗೆ, ಎಚ್ ಡಿ ದೇವೇಗೌಡ, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಡಿ.ವಿ ಸದಾನಂದಗೌಡ ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲರೂ ನಾಳೆ ನಡೆಯಲಿರುವ ದಿಲ್ಲಿ ಚಲೋದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


Share this with Friends

Related Post