ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ಮಂಗಳವಾರ ಹೈಕೋರ್ಟ್ ವಜಾ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.
ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಲಿಂಕ್‌ಗಳು ಸಹ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಹೀಗಾಗಿ ಬಂಧನ ಕಾನೂನು ಬಾಹಿರವಾಗಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.
ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಬಂಧನವು ಅವಲಂಬಿತ ದಾಖಲೆಯನ್ನು ಆಧರಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಾಹಿತಿಯನ್ನು ಇಮೇಲ್ ಕಳುಹಿಸಿ ಪರಿಶೀಲಿಸಲಾಗುವುದು ಎಂದು ಸೂಚಿಸಿದರು. ಈ ನಡುವೆ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ವಾರಕ್ಕೆ ಐದು ಸಭೆಗಳಿಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರೋಸ್ ಅವೆನ್ಯೂ ಕೋರ್ಟ್ ವಜಾ ಮಾಡಿದೆ.