Fri. Nov 1st, 2024

ಜನರ‌ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ

Share this with Friends

ಬೆಂಗಳೂರು, ಫೆ.8: ಹಿರಿಯ ನಾಗರೀಕರು, ಮಹಿಳೆಯರು ವಿಕಲಚೇತನರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಲ್ಲಿ‌ ಸಮಸ್ಯೆಗಳನ್ನು ತೋಡಿಕೊಂಡರು.

ಸಿದ್ದರಾಮಯ್ಯ ಮುಖ್ಯ ಮಂತ್ರಿ ಯಾದನಂತರ ಇದು ಎರಡನೆ ಜನಸ್ಪಂದನ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಸಾವಿರಾರು ಮಂದಿ ಸಮಸ್ಯೆಗಳನ್ನು ಹೊತ್ತು ಆಗಮಿಸಿದ್ದರು.

ಸಾಧ್ಯವಾದ ಸಮಸ್ಯೆಗಳನ್ನು ಸಿಎಂ ಸ್ಥಳದಲ್ಲೇ ಪರಿಹರಿಸಿದರು,ಜತೆಗೆ ಹಿರಿಯ ನಾಗರೀಕರು, ವಿಕಲಚೇತನರ ಬಳಿಗೇ ಹೋಗಿ ಅವರ‌ ಹೆಗಲ ಮೇಲೆ ಕೈ ಇಟ್ಟು ಆತ್ಮೀಯವಾಗಿ ಮಾತನಾಡಿಸಿ ಸಮಸ್ಯೆ ಏನೆಂದು ಸಿಎಂ ಕೇಳುತ್ತಿದ್ದುದು ಕಂಡುಬಂದಿತು.

ಈ ವೇಳೆ ಸಿಎಂ ಮಾತನಾಡಿ,ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು‌ ನಮ್ಮ ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಎಂದು ಹೇಳಿದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ.

ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ಹೇಳಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ‌ಹೇಳಿದರು.

ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದರು,ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಿಎಂ ಜನರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅತ್ಯಗತ್ಯವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.


Share this with Friends

Related Post