ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರು ಸುಡು ಬಿಸಿಲಿನಲ್ಲಿಯೂ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಅನಂತ ಧನ್ಯವಾದಗಳು. ಕಾರ್ಯಕರ್ತರು ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡಗಳನ್ನು ವಿತರಿಸುವ ಮೂಲಕ ನನ್ನ ಪರವಾಗಿ ಮತಯಾಚಿಸಿದ್ದಾರೆ. ಒಂದು ಲಕ್ಷಗಳ ಅಂತರದಿಂದ ಗೆಲುವು ಸಾಧಿಸುತ್ತೇನೆಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಇನ್ನು ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಅಸ್ರ್ತವಾಗುತ್ತವೆ ಎಂಬ ನಂಬಿಕೆಯನ್ನು ಇಟ್ಟುಕೊಂಡಿದ್ದೇನೆ. ಪ್ರಚಾರಕ್ಕೆ ತೆರಳಿದಾಗ ಸಾಕಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳ ಬಗ್ಗೆ ಖುಷಿ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ನಾನು ಗೆದ್ದರೆ ಪ್ರಾಮಾಣಿಕವಾಗಿ ಯುವಕರಿಗೆ ಉದ್ಯೋಗ ಕಲ್ಪಿಸುತ್ತೇನೆ. ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡುತ್ತೇನೆಂದರು.