Wed. Dec 25th, 2024

ಪೆನ್ ಡ್ರೈವ್ ಪ್ರಕರಣ:ಸಿಬಿಐ ತನಿಖೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ಮನವಿ

Share this with Friends

ಬೆಂಗಳೂರು,ಮೇ.9: ಹಾಸನ ವಿಡಿಯೋ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಈ ಪ್ರಕರಣಗಳ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ, ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಜೆಡಿಎಸ್ ನಾಯಕರು ಆಗ್ರಹಿಸಿದರು.

ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಇದೇ ವೇಳೆ ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ದೂರು ಸಲ್ಲಿಸಿತು.

ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಹಾಗೂ ಚಿತ್ರಗಳನ್ನು ಪ್ರಜ್ವಲ್ ಅವರ ಮೊಬೈಲ್ ಕದ್ದು ಸೋರಿಕೆ ಮಾಡಿದ್ದಾರೆ. ಕಾರ್ತಿಕ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿ ಸಂಚು ರೂಪಿಸಿದ್ದಾರೆ, ಈವರೆಗೂ ಕಾರ್ತಿಕ್ ನನ್ನು ಬಂಧಿಸಿಲ್ಲ ಎಂದು ದೂರಿದರು.

ಹಾಸನ ಸೇರಿದಂತೆ ರಾಜ್ಯಾದ್ಯಂತ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣದ ಆರೋಪಿಗಳ ಬಗ್ಗೆ ದೂರು ದಾಖಲಾಗಿದ್ದರೂ ಈವರೆಗೆ ಬಂಧಿಸಿಲ್ಲ. ಈ ಕೃತ್ಯದಲ್ಲಿ ನವೀನ್ ಗೌಡ ಎಂಬ ವ್ಯಕ್ತಿ ಭಾಗಿಯಾಗಿದ್ದು, ಹಾಸನದಲ್ಲಿ ಎಫ್ಐಆರ್ ಆಗಿದ್ದರೂ ಅವನನ್ನು ತನಿಖಾ ತಂಡ ಬಂಧನ ಮಾಡಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೋಗಳ ಹಂಚಿಕೆ ಮಾಡುವುದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಕರಣದಲ್ಲಿ ನೊಂದಿರುವ ಮಹಿಳೆಯರಿಗೆ ಇದರಿಂದ ಬಹಳ ಆಘಾತವಾಗಿದೆ ಎಂದು ತಿಳಿಸಲಾಗಿದೆ.

ವಕೀಲ, ಬಿಜೆಪಿ ಮುಖಂಡ ದೇವರಾಜೆ ಗೌಡ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆಯಲ್ಲಿ ಪೆನ್ ಡ್ರೈವ್ ಸಂಚು ಬಹಿರಂಗವಾಗಿದೆ. ರಾಜ್ಯ ಸರ್ಕಾರ ರಚನೆ ಮಾಡಿರುವ ತನಿಖಾ ತಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಎಸ್ ಐಟಿ ಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ನೇರವಾಗಿ ಆರೋಪಿಸಿತು

ಈ ಎಸ್ ಐಟಿ ಯಿಂದ ಈ ಪ್ರಕರಣದ ಪಾರದರ್ಶಕ, ನ್ಯಾಯಯುತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಲು ಮಧ್ಯ ಪ್ರವೇಶ ಮಾಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿತು.

ನಿಯೋಗದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ.ಕುಮಾರಸ್ವಾಮಿ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ಅಲ್ಕೊಡ್ ಹನುಮಂತಪ್ಪ, ಆನಂದ್ ಅಸ್ನೋಟಿಕರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಕರೆಮ್ಮ ನಾಯಕ್, ರಾಜುಗೌಡ ಪಾಟೀಲ್ ಸೇರಿದಂತೆ ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಜರಿದ್ದರು.


Share this with Friends

Related Post