Fri. Nov 1st, 2024

ಪ್ರಜಾಪ್ರಭುತ್ವ,ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು:ಸಿಎಂ

Share this with Friends

ಬೆಂಗಳೂರು, ಮೇ. 27: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರು‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು ಎಂದು ಬಣ್ಣಿಸಿದರು.

ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಸಿದ್ದು ಹೇಳಿದರು.

ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ.

ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು‌ ಸಿಎಂ ಪ್ರಶ್ನಿಸಿದರು.

ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್ ಎಸ್ ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ, ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ.
28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ ಎಂದು ಟೀಕಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.


Share this with Friends

Related Post