Mon. Dec 23rd, 2024

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ‌ ಭಾಷಣ:ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ

Share this with Friends

ಬೆಂಗಳೂರು,ಫೆ.12: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು,ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಹುಪರಾಕ್ ಹೇಳಿದರು.

ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನ ಒದಗಿಸಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಹೇಳಿದರು.

ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎಂಬ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದಿವೆ

ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ, ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ.

ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ ಎಂದು ಗೆಹ್ಲೋಟ್ ತಿಳಿಸಿದರು.

ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ.

ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

ಭಾಷಣದಲ್ಲಿ ರಾಜ್ಯಪಾಲರು ಸರ್ಕಾರದ ಮುಂದಿನ ಯೋಜನೆಗಳನ್ನು ಬಿಡಿಸಿಟ್ಟರು.

ಮಂಗಳವಾರದಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ಕೋರಲಾಯಿತು.

ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಿಕ್ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು.

ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು.


Share this with Friends

Related Post