ಬೆಂಗಳೂರು,ಜೂ.6: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು,
ಸಚಿವ ನಾಗೇಂದ್ರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಧ ನಾಗೇಂದ್ರ
ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿತ್ತು.
ನಾಗೇಂದ್ರ ಅವರು ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಸಂಜೆ 7.30 ರ ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರಿಗೆ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.
ಯಾರಿಗೂ ಮುಜುಗರ ಆಗಬಾರದು ಎಂಬ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ ನಾಗೇಂದ್ರ,
ಎಸ್ ಐಟಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ,ನಾನು ಸಚಿವ ಸ್ಥಾನದಲ್ಲಿ ಇದ್ದರೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.
ಈ ಹಗರಣದಲ್ಲಿ ನಾನು ಭಾಗಿ ಆಗಿಲ್ಲ, ತನಿಖೆ ನಂತರ ನಾನು ನಿರ್ದೋಷಿ ಆಗಿ ಹೊರಬರುತ್ತೇನೆ ನಂತರ ಮತ್ತೆ ಸಚಿವನಾಗುತ್ತೇನೆ ಎಂದು ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮ ಅಳಿಯ ಈ ಹಗರಣದಲ್ಲಿ ಭಾಗಿ ಆಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಇದೆಲ್ಲ ಊಹಾಪೋಹ ಎಂದಷ್ಟೆ ಹೇಳಿದರು.