ತುಮಕೂರು,ಜೂ.13: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಅಗತ್ಯಬಿದ್ದರೆ ಸಿಐಡಿಯವರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ,ಬಿ ಎಸ್ ವೈ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದಿದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು
ಅದರ ಬೆನ್ನಲ್ಲೇ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.