Fri. Nov 1st, 2024

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ಅರ್ಥಪೂರ್ಣ ಸಾಹಿತ್ಯ ಸಮ್ಮೇಳನ:ಸಿದ್ದರಾಮಯ್ಯ

Share this with Friends

ಬೆಂಗಳೂರು, ಜೂ.25: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಸಿಎಂ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ನಲ್ಲಿ ಸಮ್ಮೇಳನ ನಡೆಸುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಇದ್ದ‌‌ ಕಾರಣ ಮುಂದೂಡಲಾಗಿತ್ತು ಎಂದು ಹೇಳಿದರು.

ಈಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಮುಖ್ಯ ಮಂತ್ರಿಗಳು ಮನವಿ ಮಾಡಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ನಂದಿನಿ ಹಾಲಿನ ದರ ಏರಿಕೆ‌ ಬಗ್ಗೆ ‌ಮಾಧ್ಯಮದವರು ಗಮನ ಸೆಳೆದಾಗ,
ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ,ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು,ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುತ್ತೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.


Share this with Friends

Related Post