ಬೆಂಗಳೂರು,ಜು.9: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಿಎಂಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಗತ್ಯವಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಡಿಕೆಶಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರು ನಗರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು ಎಂದು ತಿಳಿಸಿದರು.
ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಗತ್ಯವಿದೆ ಬೆಂಗಳೂರು ಜಾಗತಿಕ ಮನ್ನಣೆ ಹೊಂದಿದ್ದು, ಈ ಜಿಲ್ಲೆಯ ಹೆಸರು ಉಳಿಸಿಕೊಳ್ಳಲು ನನ್ನ ನೇತೃತ್ವದಲ್ಲಿ ಜಿಲ್ಲೆಯ ನಾಯಕರು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ.
ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ ಎಂದು ಡಿಕೆಶಿ ತಿಳಿಸಿದರು.
ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ, ಇರುವ ಜಿಲ್ಲೆ ಹಾಗೇ ಇರಲಿದೆ,ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ ಈ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.