Mon. Dec 23rd, 2024

ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್‌: ಆರ್‌.ಅಶೋಕ್ ಶ್ಲಾಘನೆ

Share this with Friends

ಬೆಂಗಳೂರು, ಜು. 23: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಸುಭದ್ರ ಬಜೆಟ್‌ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಶೋಕ್,ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.

ರೈತರು, ಮಹಿಳೆಯರು, ಯುವಜನರು, ತೆರಿಗೆ ಪಾವತಿಸುವವರ ಬದುಕನ್ನು ವಿಶ್ಲೇಷಿಸಿ ಅವರ ಅನುಕೂಲಕ್ಕೆ ತಕ್ಕಂತ ಬಜೆಟ್‌ ನೀಡಲಾಗಿದೆ,ಅದಕ್ಕಾಗಿ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಕಾಂಗ್ರೆಸ್‌ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲ ನೀಡುವ ಪಿಎಂ ಗತಿಶಕ್ತಿ ಮಾಸ್ಟರ್‌ ಪ್ಲಾನ್‌ ಅನ್ನು ಕೇಂದ್ರ ಸರ್ಕಾರ ಇನ್ನೂ 1 ವರ್ಷ ಮುಂದುವರಿಸಲಿದೆ,ಅದಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಖಾಲಿ ಕೈನ ರಾಜ್ಯ ಸರ್ಕಾರ ಇಂತಹ ಯೋಜನೆಗಳನ್ನು ಬಳಸಿಕೊಂಡಾದರೂ ಜನಕಲ್ಯಾಣಕ್ಕೆ ಶ್ರಮಿಸಲಿ ಎಂದು ಅಶೋಕ್‌ ಚಾಟಿ ಬೀಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಅನ್ನಭಾಗ್ಯ ಯೋಜನೆ ಮುಂದುವರಿಸಲು ಹಾಗೂ ಅಕ್ಕಿ ನೀಡಲು ಇನ್ನೂ ತಿಣುಕಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಿಸಿ, 80 ಕೋಟಿ ಜನರಿಗೆ ಆಹಾರ ಭದ್ರತೆ ಕಲ್ಪಿಸಿದೆ ಎಂದು ಹೇಳಿದರು.

ಕ್ಯಾನ್ಸರ್‌ನ 3 ಔಷಧಿಗಳ ಮೇಲಿನ ಕಸ್ಟಮ್‌ ತೆರಿಗೆ ರದ್ದುಪಡಿಸಿ, ರೋಗಿಗಳ ಕುಟುಂಬಕ್ಕೆ ವೆಚ್ಚ ಕಡಿಮೆ ಮಾಡಲಾಗಿದೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.6 ರಷ್ಟು ಕಡಿತ, ಮೊಬೈಲ್ ಹಾಗೂ ಚಾರ್ಜರ್‌ಗಳ ಮೇಲಿನ ತೆರಿಗೆ ಇಳಿಕೆ ಮೊದಲಾದ ಶ್ಲಾಘನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಇದು ಬೆಲೆ ಇಳಿಕೆಯ ಸುರಕ್ಷಿತ ಬಜೆಟ್‌ ಎಂದು ಬಣ್ಣಿಸಿದರು.

ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗಿ ಜನರಿಗೆ ಸುಭದ್ರ ಬದುಕು ಸಿಗಲಿದೆ. ಈ ದೂರದೃಷ್ಟಿಯ ಯೋಜನೆಯಿಂದ ರಾಜಧಾನಿ ಬೆಂಗಳೂರು ತನ್ನ ಹಿರಿಮೆಯನ್ನು ಉಳಿಸಿಕೊಳ್ಳಲಿದೆ. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಉತ್ತಮ ಕೊಡುಗೆಯನ್ನೇ ನೀಡಿದೆ,ಹಾಗಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ, 1 ಕೋಟಿ ಕುಟುಂಬಗಳಿಗೆ 300 ಯುನಿಟ್ ವಿದ್ಯುತ್‌, ಮುದ್ರಾ ಯೋಜನೆಯಡಿ 20 ಲಕ್ಷ ರೂ. ಸಾಲ, 1 ಲಕ್ಷ ವಿದ್ಯಾರ್ಥಿಗಳಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ಈ ಎಲ್ಲಾ ಯೋಜನೆಗಳು ಜನಕಲ್ಯಾಣಕ್ಕೆ ಹೊಸ ಭಾಷ್ಯ ಬರೆಯಲಿವೆ ಎಂದು ಆರ್.ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದರು.


Share this with Friends

Related Post