Fri. Nov 1st, 2024

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ:ಸಿದ್ದರಾಮಯ್ಯ ಸಮರ್ಥನೆ

Share this with Friends

ಬೆಂಗಳೂರು, ಜು.26: ನನ್ನ ರಾಜಕೀಯ ಜೀವನ ತೆರೆದ ಪುಸ್ತಕದಂತಿದೆ, ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಸಿಎಂ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ,
ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಹೇಳಿದರು.

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು ಆದರೆ ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿವೇಶನದಲ್ಲಿ ವಿರೋಧ ಪಕ್ಷಗಳು ತಮ್ಮ ಹೊಣೆಗಾರಿಕೆ ನಿಭಾಯಿಸಲಿಲ್ಲಾ,
ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ, ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ಭರಿತರಾಗಿ ನುಡಿದರು.

ಎರಡು ವಾರ ಕೂಡಾ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಮಾಡಿದರೇ ಹೊರತು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಅಸಮಾಧಾನ ಪಟ್ಟರು‌ ಸಿಎಂ.

ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ನಾನು ಮಂತ್ರಿಯಾಗಿ 40 ವರ್ಷ ಆಯ್ತು ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ, ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಪುನರುಚ್ಛರಿಸಿದರು.

ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ,ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ.ನಾವು ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ಶೇ13 ರಷ್ಟು ಮತಗಳನ್ನು ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ‌ ಎಂದು ಸಿಎಂ ಟೀಕಿಸಿದರು.


Share this with Friends

Related Post