Mon. Dec 23rd, 2024

ಸರ್ಕಾರ,ಐಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಆರೋಪ

Share this with Friends

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಐಜಿಪಿ ಚಂದ್ರಶೇಖರ್ ವಿರುದ್ಧ ದಾಖಲೆಗಳ ಸಹಿತ ಕೇಂದ್ರ ಸಚಿವ‌ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದು, ಆತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಕೃಪಾಕಟಾಕ್ಷವಿದೆ ಎಂದು ಆರೋಪಿಸಿದರು

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಐಜಿಪಿ ಚಂದ್ರಶೇಖರ್ ವಿರುದ್ಧ ದಾಖಲೆಗಳ ಸಹಿತ ಆರೋಪ ಮಾಡಿದರು.

ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ ದರೋಡೆಕೋರ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ಚಂದ್ರಶೇಖರ್ ಅವರಂಥ ಕಳಂಕಿತ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡುತ್ತೇನೆ ಎಂದು ಹೆಚ್ ಡಿ ಕೆ ತಿಳಿಸಿದರು.

ನನ್ನ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಲೋಕಾಯುಕ್ತಕ್ಕೆ ಬರೆದಿದ್ದ ಅತಿ ಗೌಪ್ಯ ಪಾತ್ರವೊಂದು ಸೋರಿಕೆ ಆಗಿತ್ತು. ಅದು ನಮ್ಮ ಕುಟುಂಬದ ವಿರುದ್ಧ ಅನೇಕ ತಿಂಗಳಿನಿಂದ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಗೆ ಆ ಪತ್ರ ಸೋರಿಕೆ ಆಗಿತ್ತು. ಅದು ಐಜಿಪಿ ಚಂದ್ರಶೇಖರ್ ಅವರಿಂದಲೇ ಸೋರಿಕೆ ಆಗಿದೆ.

ಆದರೆ, ಅದೇ ಅಧಿಕಾರಿ ರಾಜ್ಯಪಾಲರ ಕಚೇರಿಯಿಂದಲೇ ಪತ್ರ ಸೋರಿಕೆ ಆಗಿದೆ ಎಂದು ಕಥೆ ಕಟ್ಟಿ ರಾಜ್ಯಪಾಲರ ಕಾರ್ಯಾಲಯದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಅನುಮತಿ ಕೊಡುವಂತೆ ಲೋಕಾಯುಕ್ತ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಮತ್ತು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರ ಕಾರ್ಯಾಲಯದ ಬಗ್ಗೆ ತನಿಖೆಗೆ ಅನುಮತಿ ಕೋರುವ ದರ್ಪವನ್ನು ಈ ಅಧಿಕಾರಿ ತೋರಿಸಿದ್ದಾರೆ. ಈ ಅಧಿಕಾರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಸಿದರು.

ಈ ಸರ್ಕಾರ ಒಬ್ಬರಿಗೆ ಮಾತ್ರ ಈ ರೀತಿಯ ಆಮಿಷ ಒಡ್ಡಿಲ್ಲ, ಬಿ.ಕೆ.ಸಿಂಗ್, ಎಂ.ಚಂದ್ರಶೇಖರ್, ಗುಪ್ತದಳ ಮುಖ್ಯಸ್ಥರು ಸೇರಿದಂತೆ ಅನೇಕರಿಗೆ ಕಮಿಷನರ್ ಮಾಡುತ್ತೇವೆ ಎಂದು ಟೋಪಿ ಹಾಕಿದ್ದಾರೆ ಕುಮಾರಸ್ವಾಮಿ ಆರೋಪಿಸಿದರು.

ನಿಯೋಜನೆ ಮೇಲೆ ಬಂದ ಈ ವ್ಯಕ್ತಿ ಆಮೇಲೆ ಕರ್ನಾಟಕ ಕೇಡರ್ ಅಧಿಕಾರಿ ಆಗುತ್ತಾರೆ. ಅದಕ್ಕೆ ಏನೆಲ್ಲಾ ಅಕ್ರಮ ಎಸಗಿದರು, ಯಾರು ಯಾರ ನೆರವು ಪಡೆದುಕೊಂಡರು ಎನ್ನುವುದನ್ನು ನಾನು ಇಲ್ಲಿ ಹೇಳುವಂತಿಲ್ಲ. ಅದು ಬಹಳ ಸೂಕ್ಷ್ಮ ವಿಚಾರ ಎಂದು ಹೆಚ್ ಡಿ ಕೆ ತಿಳಿಸಿದರು.

ಇದೇ ಅಧಿಕಾರಿ ಚಂದ್ರಶೇಖರ್ ತನ್ನ ಪತ್ನಿ ಹೆಸರಿನಲ್ಲಿ 38 ಮಹಡಿಯ ವಾಣಿಜ್ಯ ಕಟ್ಟಡ ಕಟ್ಟುತ್ತಿದ್ದಾರೆ. ಅದೂ ರಾಜಕಾಲುವೆ ಮೇಲೆ ಮಹಡಿ ಕಟ್ಟುತ್ತಿದ್ದಾರೆ. ಅಲ್ಲದೆ, ಕೆರೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಾಗಿದೆ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಒತ್ತಸಯಿಸಿದರು.


Share this with Friends

Related Post