ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮುಖ್ಯ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಜನರಲ್ಲಿ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಿರ್ಮಿಸಿರುವ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಹಾಗೂ ವಿಶೇಷವಾಗಿ ದೇಶದ ಮುಂದಿನ ಜವಾಬ್ದಾರಿಯುತ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮುಖ್ಯವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಜಾಗೃತಿ ಮಳಿಗೆ ಬಹಳ ಅರ್ಥಪೂರ್ಣವಾಗಿದೆ. ಮಳಿಗೆಯಲ್ಲಿ ಅನಾವರಣಗೊಳಿಸಿರುವ ವಿಷಯಗಳು, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಸೇರಿದಂತೆ ಸಮಾಜದಲ್ಲಿ ಉತ್ತುಂಗ ಸ್ಥಾನದಲ್ಲಿರುವ ಗಣ್ಯರ ಜಾಗೃತಿ ಸಂದೇಶ, ಸಮಾಜದಲ್ಲಿ ಗಟ್ಟಿಯಾಗಿ ಬೇರೂರಲು ಪ್ರಯತ್ನಿಸುತ್ತಿರುವ ದುಷ್ಟ ಚಟಗಳನ್ನು ನಿಯಂತ್ರಿಸುವ ಸಂಬಂಧ ಒಳ್ಳೆಯ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಅಯೂಬ್ ಖಾನ್ ಅವರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಪ್ರಕಟಿಸಿರುವ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪುಸ್ತಕ ಮತ್ತು ಮಡಕೆ ಪತ್ರವನ್ನು ಬಿಡುಗಡೆ ಗೊಳಿಸಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಮಹೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಮತ್ತಿತರರು ಹಾಜರಿದ್ದರು.