ನವದೆಹಲಿ: ಬೆಳಗಾವಿಯ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿ ದ್ದಾರೆ.
ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗ ಆಯ್ಕೆ ಮಾಡಿಕೊಂಡಿರುವುದು ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರು ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಹೇಳಿದ್ದಾರೆ.
ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.