ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.