Sun. Jan 12th, 2025

ಮೂರು ಹಸುಗಳಿಗೆ ಟಾರ್ಚರ್ ನೀಡಿ ವಿಕೃತಿ: ಅಶೋಕ್ ಆಕ್ರೋಶ

Share this with Friends

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ, ವಿನಾಯಕ ನಗರದಲ್ಲಿ
ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ.

ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಅವುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಘಟನೆ ಬಗ್ಗೆ ಕಿಡಿ ಕಾರಿ, ಈ ಭಾಗದಲ್ಲಿ ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಅಶೋಕ್ ಆಕ್ರೋಶ:
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ‌ ಧಾವಿಸಿ ಪರಿಶೀಲಿಸಿದ ಪ್ರತಿಪಕ್ಷ ನಾಯಕ ಅಶೋಕ್,
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ ಮಾಡುವುದಾಗಿ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದು ಕಿಡಿಕಾರಿದರು.

ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನುತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಕಿಡಿಕಾರಿದರು.

ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಿಲ್ಲ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು

ಚಾಮರಾಜಪೇಟೆಯಲ್ಲಿ ಮಾದಕ ವಸ್ತು ದಂಧೆ ನಡೆಯುತ್ತಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ ಗಳಲ್ಲಿ ಮಾತ್ರೆ, ಔಷಧಿಗಳನ್ನು ಮಾದಕ ವಸ್ತುಗಳಾಗಿ ಬಳಸಲಾಗುತ್ತಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.


Share this with Friends

Related Post