ಮೈಸೂರು,ಫೆ.24:ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರು ಜಿಲ್ಲೆಯ 4 ವಿಧಾನ ಸಭಾ ಕ್ಷೇತ್ರದ ಮತಗಟ್ಟೆಗಳ ಮೂಲ ಸೌಕರ್ಯಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ
ಮತಗಟ್ಟೆಗಳಲ್ಲಿ ಎಲ್ಲಾ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ
ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಪ್ರವಾಸಿಮಂದಿರದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತ ಪೂರ್ವ ಸಿದ್ದತಾ ಸಭೆಯಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾತನಾಡಿದರು.
ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳು ಇವೆಯೇ ಎಂಬ ಬಗ್ಗೆ ದೃಢೀಕರಣವನ್ನು ಮಾರ್ಚ್ 6 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದರು.
ಎರಡೂ ಜಿಲ್ಲೆಗಳ ಗಡಿಭಾಗಗಳಲ್ಲಿ ಅಂತರರಾಜ್ಯ ಚೆಕ್‍ಪೋಸ್ಟ್ ಸ್ಥಾಪಿಸಬೇಕು ಜಿಲ್ಲೆಯಿಂದ ಆಗಮಿಸುವ ಹಾಗೂ ನಿರ್ಗಮಿಸುವ ವಾಹನಗಳನ್ನು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ಚೆಕ್‍ಪೋಸ್ಟ್ ಇರುವ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಗಡಿ ರಾಜ್ಯಗಳಿಂದ ಅಕ್ರಮ ಮದ್ಯ, ಹಣ, ಇತರೆ ಮಾದಕ ವಸ್ತುಗಳು ಸಾಗಾಣಿಕೆಯಾಗದಂತೆ ಕಟ್ಟೆಚ್ಚೆರ ವಹಿಸಬೇಕು,ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಣೆಗೆ ಹೆಚ್ಚುವರಿ ತಂಡಗಳನ್ನು ನಿಯೋಜನೆ ಮಾಡಬೇಕೆಂದು ಸಲಹೆ ನೀಡಿದರು
ಲೋಕಸಭಾ ಕ್ಷೇತ್ರದ ಚುನಾವಣೆಗೆ ಎರಡು ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕೆಂದು ಡಾ.ಕೆ.ವಿ.ರಾಜೇಂದ್ರ ಹಾಗೂ ಶಿಲ್ಪಾ ನಾಗ್ ಸೂಚಿಸಿದರು.
ಸಭೆಯಲ್ಲಿ ಮೈಸೂರು ಜಿ ಪಂ ಸಿಇಒ ಕೆ.ಎಂ. ಗಾಯಿತ್ರಿ, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್, ಚಾಮರಾಜನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.