ಬೆಂಗಳೂರು:ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ ₹50 ಸೇರಿಸಿ ರೈತರಿಗೆ ಪ್ರತಿ ಟನ್ ಕಬ್ಬಿಗೆ ₹3,300 ಕೊಡಬೇಕು ಎನ್ನುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಸಂಬಂಧ ವಿಧಾನಸೌಧದಲ್ಲಿ ಸತತ ಏಳು ಗಂಟೆಗಳ ನಿರಂತರ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಾವು ನಾಡಿನ ರೈತರ ಹಿತವನ್ನೇ ಮುಖ್ಯವಾಗಿಸಿಕೊಂಡು ದೃಢ ನಿರ್ಧಾರಕ್ಕೆ ಬಂದಿದ್ದೇವೆ. ಪ್ರತಿ ಟನ್ ಕಬ್ಬಿಗೆ ₹3,300 ಕೊಡಲು ನಿರ್ಧರಿಸಿದ್ದೇವೆ ಎಂದು ಪ್ರಕಟಿಸಿದರು.
ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.
ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದರು.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಿದ್ದು, ರೈತರು ಸಹ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು, ಕಾನೂನು ಸುವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಚಿವ ಸಂಪುಟದಲ್ಲಿ ನಿನ್ನೆ ವಿಸ್ತಾರವಾಗಿ ಚರ್ಚೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಪ್ರಧಾನಮಂತ್ರಿ ಅವರಿಗೆ ಪತ್ರ ಬರೆದಿದ್ದೇವೆ. ಸಕ್ಕರೆ ಕಾರ್ಖಾನೆ ಮಾಲೀಕರು ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಇದನ್ನು ಬಗೆಹರಿಸಲು ಚರ್ಚೆ ನಡೆಸುವುದಾಗಿ ತಿಳಿಸಿದ್ದೇವೆ.ಸಕ್ಕರೆ ಎಂಎಸ್‌ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದರು.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು, ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.
ಎಂದರು.

