ಬೆಂಗಳೂರು: ದೆಹಲಿ ಕಾರು ಸ್ಪೋಟ ಘಟನೆ ಬೆನ್ನಲ್ಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಡಿಜಿ&ಐಜಿಪಿ ಆದೇಶದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.
ದೆಹಲಿ ಕೆಂಪುಕೋಟೆ ಸಮೀಪದ ಮೆಟ್ರೋ ನಿಲ್ದಾಣದ ಗೇಟ್ 1 ರ ಸಮೀಪ ಮಾರುತಿ ಇಕೋ ವ್ಯಾನು ಸ್ಪೋಟಗೊಂಡ ದುರಂತ ಘಟನೆ ಬೆನ್ನಲ್ಲೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದು, ಏರ್ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ನಿಗಾವಹಿಸುವಂತೆ ಆಯಾ ಜಿಲ್ಲಾ ಎಸ್ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಚಿಸಿದ್ದಾರೆ. ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಹೆಚ್ಚಳ ಮಾಡುವಂತೆ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳಿಗೆ ಸೂಚನೆ ನೀಡಿದ್ದು, ಹೆಚ್ಚಿನ ಅಲರ್ಟ್ ಗೆ ಸೂಚಿಸಲಾಗಿದೆ.

