Fri. Mar 6th, 2026

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Share this with Friends

ಮೈಸೂರು: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ  ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ,  ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಮೃತರ ಕುಟುಂಬದ ವರ್ಗದವರಿಗೆ ಸಂತಾಪ:

ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ   ಬಗ್ಗೆ ಮಾಹಿತಿ ಪಡೆದು ನಂತರ  ಪ್ರತಿಕ್ರಿಯೆ ನೀಡುತ್ತೇನೆ ಎಂದರು.


Share this with Friends

Related Post