Thu. Mar 5th, 2026

ಸಿಎಂ ಚೇರ್ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುವಂತಾಗಿದೆ: ಅಶೋಕ್

Share this with Friends

ಬೆಂಗಳೂರು: ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಎಂದು ತಿಳಿಯುತ್ತಿಲ್ಲ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವೀಕ್‌ ಲೀಡರ್‌ ಆಗಿದ್ದು, ಇಡೀ ರಾಜ್ಯದಲ್ಲಿ ವೀಕ್‌ ನಾಯಕತ್ವ ಎದ್ದು ಕಾಣುತ್ತಿದೆ. ಈ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ ಎಂದರು.

ಸಿದ್ದರಾಮಯ್ಯನವರನ್ನು ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ ತಂತ್ರ- ಕುತಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ, ಆದ್ದರಿಂದ ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನವನ್ನು ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆ ಶಿವಕುಮಾರ್ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಪಾಡು ಬಂದಿರುವುದು ಶೋಚನೀಯ. 136 ಶಾಸಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ, ಡಿ.ಕೆ.ಶಿವಕುಮಾರ್‌ ಒತ್ತಡಕ್ಕೊಳಗಾಗಿ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯ ವಚನಭ್ರಷ್ಟರು ಎಂದು ಅವರೇ ಪರೋಕ್ಷವಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವಚನಭ್ರಷ್ಟ ಎಂಬ ಹಣೆಪಟ್ಟಿ ಸಿಗಲಿದೆ ಎಂದರು.


Share this with Friends

Related Post