ಚಿಕ್ಕಬಳ್ಳಾಪುರ:ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರವಾಗಿದ್ದು, ನಾವು ಜನರನ್ನು ಮತ್ತು ಸಮಾಜವನ್ನು ಬೆಸೆಯುವ ಮೂಲಕ ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇವೆ,ಆದರೆ ಬಿಜೆಪಿ ಸುಳ್ಳು ಆರೋಪಗಳ ಮೇಲೆ ಮತ್ತು ರಾಜ್ಯದ ಜನರನ್ನು ವಿಭಜಿಸುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದೆ. ನಮ್ಮದು ಸರ್ವ ಧರ್ಮ ಮತ್ತು ಸರ್ವ ಜಾತಿಯವರನ್ನು ಒಳಗೊಳ್ಳುವ ಸರ್ಕಾರ. ಸರ್ಕಾರದ ಬಳಿ ಹಣ ಇಲ್ಲ, ಖಜಾನೆ ಖಾಲಿ ಆಗಿದೆ ಎನ್ನುವ ಬಿಜೆಪಿಯ ಸುಳ್ಳು ಆರೋಪಗಳಿಗೆ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ಕೊಟ್ಟಿದೆ. ರಾಜ್ಯದ ಪ್ರತೀ ಕುಟುಂಬಗಳಿಗೂ ಪ್ರತೀ ತಿಂಗಳು ಸರ್ಕಾರದ ಹಣ ಮತ್ತು ಕಾರ್ಯಕ್ರಮಗಳು ತಲುಪುತ್ತಿವೆ ಎಂದರು.
ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ. ಜೊತೆಗೆ ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಅಭಿವೃದ್ಧಿ ನಡೆಸುತ್ತಿದ್ದೇವೆ ಎನ್ನುವುದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.
ಬಿಜೆಪಿಗೆ ರಾಜ್ಯದ ಜನ ಅಧಿಕಾರ, ಅವಕಾಶ ಕೊಟ್ಟಾಗ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಒಂದೇ ಒಂದು ಮನೆಯನ್ನೂ ಇಡೀ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿತರಣೆ ಮಾಡಲಿಲ್ಲ. ಈಗ ನಾವು ರಾಜ್ಯದ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು, ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸುತ್ತಿದ್ದೇವೆ. ಇದನ್ನು ಸಹಿಸದ ಬಿಜೆಪಿ ಸುಳ್ಳು ಆರೋಪಗಳ ಮೇಲೆ ಮತ್ತು ರಾಜ್ಯದ ಜನರನ್ನು ವಿಭಜಿಸುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದರು.
ನಾವು ಜನರನ್ನು ಮತ್ತು ಸಮಾಜವನ್ನು ಬೆಸೆಯುವ ಮೂಲಕ ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇವೆ. ಶಿಡ್ಲಘಟ್ಟದ ನೇಕಾರ ಸಮುದಾಯಕ್ಕೂ ಅನುಕೂಲ ಮಾಡಿಕೊಡಲಾಗುವುದು. ನಾವು ನುಡಿದಂತೆ ನಡೆಯುತ್ತಿದ್ದೇವೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹೀಗಾಗಿ 2028 ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.
ಇಂದು ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ.ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

