Fri. Mar 6th, 2026

ಆರ್ ಟಿ ಓ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕ್ರಮ: ರಾಮಲಿಂಗಾರೆಡ್ಡಿ

Share this with Friends

ಬೆಳಗಾವಿ ಸುವರ್ಣಸೌಧ:ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಒಂದುವೇಳೆ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇವೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಮೇಲ್ಮನೆಯಲ್ಲಿ ಡಿ.10ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 342ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಆರ್ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ /ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ ಎಂದರು.

ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದೇವೆ ಎಂದರು.

ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಯ ಅಧಿಕಾರಿ/ ಸಿಬ್ಬಂದಿಯವರನ್ನು ಭೇಟಿ ಮಾಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್ಟಿಓ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಲೋಕಾಯುಕ್ತರವರ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ದಿನಾಂಕ 01-11-2021 ರಿಂದ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ:

ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು,ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು  ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ  ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ  ನವೀಕರಿಸಬಹುದಾದ ಇಂಧನ  ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.


Share this with Friends

Related Post