ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದೇ ಶುಕ್ರವಾರ ಅರಮನೆ ಮೈದಾನದಲ್ಲಿ ನಡೆಯುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಆರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದ್ದು, ಅವರ ಆಗಮನದ ಕುರಿತು ಇನ್ನಷ್ಟೇ ಖಚಿತವಾಗಬೇಕಿದೆ ಎಂದರು.
ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ. ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗಳಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದರು.

