Fri. Mar 6th, 2026

ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ: ಸರ್ಕಾರದೊಂದಿಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಒಡಂಬಡಿಕೆ

Share this with Friends

ಬೆಂಗಳೂರು:  ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಸರ್ಕಾರ ಒಡಂಬಡಿಕೆಗೆ ಮಾಡಿಕೊಂಡಿದೆ ಇದಕ್ಕಾಗಿ  10 ಎಕರೆ ಜಾಗವನ್ನು 99 ವರ್ಷಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದಕ್ಕೆ ಸಹಿ ಹಾಕಲಾಯಿತು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಯಿತು, ಸರ್ಕಾರ ಹಾಗು ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ  10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.

ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ.ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ  ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದರು .

ಶಿಕ್ಷಣಕ್ಕೆ ನೆರವು:

ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು  ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024 ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ ಎಂದು ತಿಳಿಸಿದ  ಮುಖ್ಯಮಂತ್ರಿಗಳು  ಅಜೀಂ ಪ್ರೇಮ್ ಜಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸಾರ್ವಜನಿಕ ವ್ಯವಸ್ಥೆಗಳು  ಬಲಗೊಳ್ಳಬೇಕು:

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಅನುರಾಗ್ ಬೆಹರ್ ಮಾತನಾಡಿ, ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆಯಿಟ್ಟಿರುವ ಸಂಸ್ಥೆಯಾಗಿದ್ದು, ಸಾರ್ವಜನಿಕ ವ್ಯವಸ್ಥೆಗಳು  ಬಲಗೊಳ್ಳಬೇಕು ಎಂದರು.  ಆರೋಗ್ಯ ಶುರುವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ.  ನಮ್ಮ ಜನತೆ ಖಾಯಿಲೆ ಬೀಳದಿರುವಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಬೇಕು. ಕರ್ನಾಟಕ  ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು,  ಆರೋಗ್ಯ ವ್ಯವಸ್ಥೆಯನ್ನು ಬಲಬಡಿಸುವಲ್ಲಿ ಅಧಿಕಾರಿಗಳು, ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


Share this with Friends

Related Post