ನವದೆಹಲಿ: ಕರ್ನಾಟಕದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಭಾನುವಾರ ಚಾಲನೆ ನೀಡಿದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯ ಜೊತೆಗೆ ಈ ಎರಡು ಕ್ಷೇತ್ರಗಳ ಉಪಸಮರಕ್ಕೂ ದಿನಾಂಕ ಪ್ರಕಟಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ವೇಳಾಪಟ್ಟಿಯಂತೆ, ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.
ಚುನಾವಣಾ ವೇಳಾಪಟ್ಟಿ ಇಂತಿದೆ:
ನಾಮಪತ್ರ ಸಲ್ಲಿಕೆ ಆರಂಭ: ಮಾರ್ಚ್ 16
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 23
ನಾಮಪತ್ರ ಪರಿಶೀಲನೆ: ಮಾರ್ಚ್ 24
ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನ: ಮಾರ್ಚ್ 26
ಮತದಾನ: ಏಪ್ರಿಲ್ 9 (ಗುರುವಾರ)
ಮತ ಎಣಿಕೆ: ಮೇ 4 (ಸೋಮವಾರ)
ನೀತಿ ಸಂಹಿತೆ ಜಾರಿ:
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆ ಕ್ಷೇತ್ರದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಈ ಸ್ಥಾನಗಳು ತೆರವಾಗಿದ್ದವು. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.
ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿವೆ. ಈ ಉಪಚುನಾವಣೆಯು ರಾಜ್ಯ ಸರ್ಕಾರದ ಆಡಳಿತದ ಮೇಲಿನ ಜನಾಭಿಪ್ರಾಯದ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿದೆ.

