ಬೆಂಗಳೂರು: ನಗರದ ಕೆ.ಆರ್. ಪುರಂ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿಎಂಟಿಸಿ ಬಸ್ ಹರಿದು 20 ವರ್ಷದ ಯುವತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಯುವತಿಯನ್ನು ಮಣಿಪುರ ಮೂಲದ ಹನ್ನಾ ಇನಕಾ (20) ಎಂದು ಗುರುತಿಸಲಾಗಿದೆ. ಈಕೆ ನಗರದಲ್ಲಿ ಸ್ಪಾ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಸುಮಾರು 9:30 ರ ಸುಮಾರಿಗೆ ಹನ್ನಾ ಅವರು ತಮ್ಮ ಸ್ನೇಹಿತ ಶ್ರೀಕುನ್ ಸಬಾ ಇನಕಾ ಅವರೊಂದಿಗೆ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಕೆ.ಆರ್. ಪುರಂನ ಟಿನ್ ಫ್ಯಾಕ್ಟರಿ ಜಂಕ್ಷನ್ ಮೂಲಕ ಹಾದುಹೋಗುತ್ತಿದ್ದರು.
ಈ ವೇಳೆ ಸಿಲ್ಕ್ ಬೋರ್ಡ್ ಕಡೆಯಿಂದ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸ್ಕೂಟರ್‌ಗೆ ಪಾರ್ಶ್ವವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಹನ್ನಾ ಅವರು ನೇರವಾಗಿ ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಚಕ್ರದ ಅಡಿಗೆ ಸಿಲುಕಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಪೊಲೀಸ್ ಕ್ರಮ:
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹದೇವಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ನಿರ್ಲಕ್ಷ್ಯದ ಚಾಲನೆಯ ಆರೋಪದ ಮೇಲೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ

