ಬೆಂಗಳೂರು: ಭಾರತ ಚುನಾವಣಾ ಆಯೋಗದ (ECI) ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ‘ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ–2027’ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2027ರ ಜನವರಿ 1ನ್ನು (01.01.2027) ಅರ್ಹತಾ ದಿನಾಂಕವಾಗಿ ನಿಗದಿಪಡಿಸಿ ಈ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ಹಾಗೂ ಮುಖ್ಯ ಆಯುಕ್ತರವರ ಕಚೇರಿಯ ಸಹಾಯಕ ಆಯುಕ್ತರು (ಚುನಾವಣೆ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಈ ವಿಶೇಷ ಪರಿಷ್ಕರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2027ರ ಪ್ರಮುಖ ವೇಳಾಪಟ್ಟಿ:
1.ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಮರುಹೊಂದಾಣಿಕೆ (Rationalization/Re-arrangements of Polling Stations) 23.11.2026 ರೊಳಗೆ
2.ಏಕೀಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ (Publication of Integrated Draft Electoral Roll) 01.12.2026
3.ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ (Period for filing claims & objections) 01.12.2026 ರಿಂದ 31.12.2026 ರವರೆಗೆ
4.ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ (Disposal of claims and objections) 14.01.2027 ರೊಳಗೆ
5.ಅಂತಿಮ ಮತದಾರರ ಪಟ್ಟಿ ಪ್ರಕಟಣೆ (Final publication of electoral roll) 20.01.2027
ನಾಗರಿಕರಿಗೆ ಮನವಿ:
2027ರ ಜನವರಿ 1ಕ್ಕೆ 18 ವರ್ಷ ತುಂಬುವ ಅರ್ಹ ಯುವ ಮತದಾರರು ಹಾಗೂ ಇದುವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ನಾಗರಿಕರು ಡಿಸೆಂಬರ್ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಬಹುದು. ಅಲ್ಲದೆ, ಈಗಾಗಲೇ ಪಟ್ಟಿಯಲ್ಲಿರುವ ಮತದಾರರು ತಮ್ಮ ಹೆಸರು, ವಿಳಾಸ ಮತ್ತು ಇತರ ವಿವರಗಳನ್ನು ಪರಿಶೀಲಿಸಿಕೊಂಡು ಅಗತ್ಯವಿದ್ದಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವಂತೆ ಜಿಬಿಎ ಮನವಿ ಮಾಡಿದೆ.

