ಬೆಂಗಳೂರು: ನಗರದ ಸ್ವಚ್ಛತೆ ಹಾಗೂ ಮೂಲಸೌಕರ್ಯ ನಿರ್ವಹಣೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ (BWCC) ಆಯುಕ್ತೆ ಸಿ.ಟಿ. ಶಿಲ್ಪಾ ನಾಗ್ ಅವರು ಕೊಟ್ಟಿಗೆಪಾಳ್ಯ ವಾರ್ಡ್ ವ್ಯಾಪ್ತಿಯಲ್ಲಿ ಮುಂಜಾನೆಯೇ ದಿಢೀರ್ ಕ್ಷೇತ್ರ ಪರಿಶೀಲನೆ ನಡೆಸಿ, ಸ್ಥಳೀಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿದರು.
ನಾಗರಿಕ ಸೇವೆಗಳ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸುವ ಉದ್ದೇಶದಿಂದ ವಾರ್ಡ್‌ಗೆ ಭೇಟಿ ನೀಡಿದ ಆಯುಕ್ತರು, ಮೊದಲಿಗೆ ಪೌರಕಾರ್ಮಿಕರ ಹಾಜರಾತಿ ಕೇಂದ್ರಕ್ಕೆ (Mustering Point) ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಪೌರಕಾರ್ಮಿಕರ ಹಾಜರಾತಿ, ಸ್ವಚ್ಛತಾ ಸಲಕರಣೆಗಳ ಲಭ್ಯತೆ, ಕಸ ಸಂಗ್ರಹಣೆ ಮತ್ತು ವಿಲೇವಾರಿ ಪ್ರಕ್ರಿಯೆಯ ಕುರಿತು ಸಂಬಂಧಪಟ್ಟ ಆರೋಗ್ಯ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ವಾರ್ಡ್ ವ್ಯಾಪ್ತಿಯಲ್ಲಿ ಪ್ರತಿನಿತ್ಯ ನಿಯಮಿತವಾಗಿ ಸ್ವಚ್ಛತಾ ಕಾರ್ಯಗಳು ನಡೆಯುವಂತೆ ಹಾಗೂ ಬ್ಲ್ಯಾಕ್ ಸ್ಪಾಟ್‌ಗಳು (ಕಸದ ರಾಶಿ ಬೀಳುವ ಸ್ಥಳಗಳು) ನಿರ್ಮಾಣವಾಗದಂತೆ ಎಚ್ಚರ ವಹಿಸಲು ಸೂಚಿಸಿದರು.
ನಾಗರಿಕರೊಂದಿಗೆ ನೇರ ಸಂವಾದ:
ಪರಿಶೀಲನೆಯ ವೇಳೆ ವಾರ್ಡ್‌ನ ವಿವಿಧ ಬೀದಿಗಳಲ್ಲಿ ಸಂಚರಿಸಿದ ಶಿಲ್ಪಾ ನಾಗ್ ಅವರು, ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ರಸ್ತೆ ದುರಸ್ತಿ, ಚರಂಡಿ ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆ ಹಾಗೂ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಆಯುಕ್ತರ ಗಮನಕ್ಕೆ ತಂದರು.
ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಆಯುಕ್ತರು, ನಾಗರಿಕರು ಪ್ರಸ್ತಾಪಿಸಿದ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜೊತೆಯಲ್ಲಿದ್ದ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾಮಗಾರಿಗಳನ್ನು ವಿಳಂಬ ಮಾಡದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ತಾಕೀತು ಮಾಡಿದರು.
ಕೇವಲ ಕಚೇರಿಗೆ ಸೀಮಿತವಾಗದೆ, ಇಂತಹ ಕ್ಷೇತ್ರ ಮಟ್ಟದ ಪರಿಶೀಲನೆ ಮತ್ತು ನಾಗರಿಕರೊಂದಿಗಿನ ನೇರ ಸಂವಾದದ ಮೂಲಕ ಆಡಳಿತ ಯಂತ್ರವನ್ನು ಸಾರ್ವಜನಿಕರಿಗೆ ಮತ್ತಷ್ಟು ಹತ್ತಿರ ತರುವುದು ಪಾಲಿಕೆಯ ಮುಖ್ಯ ಉದ್ದೇಶವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮಾರ್ಗಸೂಚಿಯಂತೆ ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ನೀಡಲು ಪಶ್ಚಿಮ ನಗರ ಪಾಲಿಕೆ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

