Fri. Mar 6th, 2026

ಬಿಜೆಪಿ ಕೋರ್ ಕಮಿಟಿ ಸಭೆ: ಸರ್ಕಾರದ ವಿರುದ್ಧ ಹೋರಾಟ, ಪಕ್ಷ ಸಂಘಟನೆಗೆ ‘ಕಮಲ’ ಪಡೆ ರಣತಂತ್ರ

Share this with Friends

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇಂದು ನಗರದ ಅರಮನೆ ಮೈದಾನದಲ್ಲಿ ನಡೆದ ರಸಜ್ಯ ಕಾರ್ಯಕಾರಿಣಿ ಸಭೆ ನಂತರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಂತರಿಕವಾಗಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಚರ್ಚೆಯ ಪ್ರಮುಖ ಮುಖ್ಯಾಂಶಗಳು ಇಂತಿವೆ:

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಅನಾವರಣ: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಜನರ ಮುಂದಿಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.ಮುಖ್ಯವಾಗಿ ವಿವಿಧ ಇಲಾಖೆಗಳಲ್ಲಿನ ಅನುದಾನ ದುರುಪಯೋಗ ಹಾಗೂ ಕಾನೂನು ಸುವ್ಯವಸ್ಥೆ ಕುಸಿತದ ಬಗ್ಗೆ ಜಿಲ್ಲಾವಾರು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ನಾಯಕರು ಒಮ್ಮತದ ನಿರ್ಧಾರಕ್ಕೆ ಬಂದರು.

ಪಕ್ಷದ ಬಲವರ್ಧನೆ ಮತ್ತು ಒಗ್ಗಟ್ಟು: ಪಕ್ಷದ ಒಳಗೆ ಕೇಳಿಬರುತ್ತಿರುವ ಭಿನ್ನಧ್ವನಿಗಳನ್ನು ಶಮನಗೊಳಿಸಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ಪಡೆದು ಸಂಘಟಿತವಾಗಿ ಮುನ್ನಡೆಯುವ ಬಗ್ಗೆ ಚರ್ಚಿಸಲಾಯಿತು. ಬೂತ್ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಮತ್ತು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಯಿತು.

ಚುನಾವಣಾ ಸಿದ್ಧತೆ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವಿನ ಕಾರ್ಯತಂತ್ರದ ಬಗ್ಗೆ ಪ್ರಾಥಮಿಕ ಚರ್ಚೆಗಳು ನಡೆದವು. ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂಬ ಬಗ್ಗೆಯೂ ಅಭಿಪ್ರಾಯ ವಿನಿಮಯವಾಯಿತು.

ಕೇಂದ್ರದ ಯೋಜನೆಗಳ ಪ್ರಚಾರ: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿ ಮನೆಗೂ ತಲುಪಿಸುವ ಮೂಲಕ ಮತದಾರರ ವಿಶ್ವಾಸ ಗಳಿಸಲು ಕಾಯಕರ್ತರಿಗೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ  ಜೋಶಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗ್ರವಾಲ್,  ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಡಾ. ಸಿ.ಎನ್.ಅಶ್ವಥ್‍ನಾರಾಯಣ್ ಸಭೆಯಲ್ಲಿ ಭಾಗವಹಿಸಿದ್ದರು.

 


Share this with Friends

Related Post