ಬೆಂಗಳೂರು: ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಒಗ್ಗಟ್ಟಿನ ಹೋರಾಟ ನಡೆಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ. ಇದೇ ವೇಳೆ ಮುಂಬರುವ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್ಡಿಎ (NDA) ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಉಭಯ ಪಕ್ಷಗಳ ನಾಯಕರು ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಎಂಎಲ್ಸಿ ಎಸ್.ಎಲ್. ಭೋಜೇಗೌಡ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ಶಾಸಕರು ಮತ್ತು ಮುಖಂಡರು ಮಹತ್ವದ ಸಮನ್ವಯ ಸಭೆ ನಡೆಸಿದರು.
ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ:
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, “ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾರ್ಯತಂತ್ರ ರೂಪಿಸಿವೆ. ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಕುಡಿಯುವ ನೀರಿನ ಹಾಹಾಕಾರವಿದ್ದರೂ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಂಡಿಲ್ಲ. ರೈತರಿಗೆ ₹5,000 ಪರಿಹಾರ ನೀಡುವುದಾಗಿ ಘೋಷಿಸಿ, ಕೇವಲ 45,000 ರೈತರಿಗೆ ಅರ್ಧಂಬರ್ಧ ಹಣ ಬಿಡುಗಡೆ ಮಾಡಿ ಕೈತೊಳೆದುಕೊಂಡಿದೆ. ಬರೀ ಕೇಂದ್ರಕ್ಕೆ ಪತ್ರ ಬರೆಯುವ ಚಾಳಿ ಮುಂದುವರಿಸಿದೆ” ಎಂದು ಟೀಕಿಸಿದರು. ಬೆಲೆ ಏರಿಕೆ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಸದನದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದರು.
ಎನ್ಡಿಎ ಮೈತ್ರಿ ದೀರ್ಘಕಾಲದ್ದು: ಎಚ್ಡಿಕೆ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, “ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಇದು ದೀರ್ಘಕಾಲ ಮುಂದುವರಿಯಲಿದೆ. ನಮ್ಮ ನಡುವೆ ಯಾವುದೇ ಗೊಂದಲ ಅಥವಾ ಮನಸ್ತಾಪಕ್ಕೆ ಅವಕಾಶವಿಲ್ಲ. ಹಿರಿಯೂರು ಮತ್ತು ಧಾರವಾಡ ಉಪಚುನಾವಣೆಗಳಲ್ಲಿ ಜೆಡಿಎಸ್ ಅಥವಾ ಬಿಜೆಪಿ ಎಂಬ ಭೇದವಿಲ್ಲದೆ ಎನ್ಡಿಎ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. ಮುಂದಿನ ಜಿಬಿಎ (GBA) ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ” ಎಂದರು.
ಸಮನ್ವಯ ಸಮಿತಿ ರಚನೆಗೆ ನಿರ್ಧಾರ:
“ಸದ್ಯದ ಮಟ್ಟಿಗೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಮುಖ್ಯವಲ್ಲ; ಕಾಂಗ್ರೆಸ್ ದುರಾಡಳಿತವನ್ನು ಕೊನೆಗಾಣಿಸಿ ಎನ್ಡಿಎ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇದಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಎನ್ಡಿಎ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು. ರಾಜ್ಯ ಸರ್ಕಾರ ಕೇವಲ ಘೋಷಣೆಗಳಿಗೆ ಸೀಮಿತವಾಗಿದ್ದು, ಜನಪರ ವಿಚಾರಗಳನ್ನು ಅಧಿವೇಶನದಲ್ಲಿ ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುತ್ತೇವೆ” ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

