ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ (SIR Enumeration) ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳು (BLO) ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಫಾರ್ಮ್‌ಗಳನ್ನು ವಿತರಿಸಬೇಕು. ಆದರೆ ಬೆಂಗಳೂರಿನಲ್ಲಿ ಬಿಎಲ್‌ಒಗಳು ಮನೆಗಳಿಗೆ ಭೇಟಿ ನೀಡುತ್ತಿಲ್ಲ. ಬದಲಿಗೆ, ಕಾಂಗ್ರೆಸ್ ನಾಯಕರು ಸೂಚಿಸಿದ ಧಾರ್ಮಿಕ ಮತ್ತು ಪ್ರಮುಖ ಸ್ಥಳಗಳಲ್ಲಿ ಸಾಮೂಹಿಕವಾಗಿ ಕುಳಿತುಕೊಂಡು ಫಾರ್ಮ್‌ಗಳನ್ನು ಭರ್ತಿ ಮಾಡಿಸಿಕೊಳ್ಳಲಾಗುತ್ತಿದೆ. ಈ ವ್ಯವಸ್ಥಿತ ಅಕ್ರಮದ ವಿರುದ್ಧ ಈಗಾಗಲೇ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಲಾಗಿದೆ ಎಂದು ಅವರು ತಿಳಿಸಿದರು. ತಮ್ಮ ಪಕ್ಷದ ಬಿಎಲ್‌ಎ-೨ (BLA-2) ಕಾರ್ಯಕರ್ತರಿಗೆ ಈ ಕುರಿತು ಸೂಕ್ತ ತರಬೇತಿ ನೀಡಲಾಗಿದ್ದರೂ, ರಾಜ್ಯ ಸರ್ಕಾರವು ಇವರ ಸಹಕಾರವನ್ನು ಪಡೆದುಕೊಳ್ಳುತ್ತಿಲ್ಲ ಎಂದು ಅವರು ದೂರಿದರು.
ಅಡ್ಡ ಮತದಾನ ಮಾಡಿದವರಿಗೆ ಶಿಸ್ತು ಕ್ರಮದ ಎಚ್ಚರಿಕೆ
ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಅಡ್ಡ ಮತದಾನ (Cross Voting) ಮಾಡಿರುವ ನಾಯಕರ ವಿರುದ್ಧ ಕಠಿಣ ಕಾನೂನು ಮತ್ತು ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಗರ್ವಾಲ್ ಇದೇ ವೇಳೆ ಸ್ಪಷ್ಟಪಡಿಸಿದರು. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ತಿರುಗೇಟು ನೀಡಿದ ಅವರು, “ಕುಂಕುಮ ಧರಿಸುವ ವಿಚಾರದಲ್ಲಿ ಅವರು ನೀಡಿರುವ ಹೇಳಿಕೆ ಸರಿಯಲ್ಲ. ಅವರ ಮಾತುಗಳನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ” ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿ ಸಮನ್ವಯ ಸಮಿತಿ ರಚನೆ
ವಿರೋಧ ಪಕ್ಷಗಳ ಮುಸ್ಲಿಂ ತುಷ್ಟೀಕರಣ ನೀತಿ ಮತ್ತು ಭ್ರಷ್ಟಾಚಾರವೇ ಮುಂಬರುವ ದಿನಗಳಲ್ಲಿ ನಮಗೆ ರಾಜಕೀಯವಾಗಿ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಮಾರ್ಮಿಕವಾಗಿ ನುಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಡುವೆ ಅತ್ಯುತ್ತಮ ಸಮನ್ವಯವಿದೆ ಎಂದರು. ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಮಾಹಿತಿ ನೀಡಿದರು.

