ನವದೆಹಲಿ,ಮಾ.20: ಲೋಕಸಭೆ ಚುನಾವಣೆಗೆ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ, ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ಮೂರನೇ ಪಟ್ಟಿ ಬಿಡುಗಡೆ ನಂತೆ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಿದರು.
ಸದಾನಂದ ಗೌಡ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳಿಲ್ಲ ಆದ್ದರಿಂದ ಬಿಜೆಪಿಯ ಅತೃಪ್ತ ನಾಯಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಉತ್ತರಿಸಿದರು.
ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ
ಕೇಳಗಿಳಿಯಬೇಕಾಗುತ್ತೆ ಎಂಬ ಈಶ್ವರಪ್ಪ ಅವರ ಹೇಳಿಕೆಗೆ, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಬಿಜೆಪಿ ಉತ್ತಮ ಬೆಳವಣಿಗೆ ಕಂಡಿದೆ. ತಮ್ಮ ಮಗನಿಗೆ ಸೀಟು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ,ಇಂತಹ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲಾ ಜನ ಕೊಡ್ತಾರೆ ಎಂದು ಬಿ ಎಸ್ ವೈ ಹೇಳಿದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಅನುಕೂಲ ಆಗಿದೆ, 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗಲಿದೆ, ಅಮಿತ್ ಶಾ, ಮೋದಿ ಜೊತೆಗೆ ಹೆಚ್. ಡಿ ದೇವೇಗೌಡರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.
ಅಸಮಾಧಾನಿತ ನಾಯಕರ ಜೊತೆ ನಾನು ಮಾತನಾಡುತ್ತೇನೆ. ಸಂಗಣ್ಣ ಕರಡಿ ಜೊತೆ ನಾನು ಮಾತನಾಡಿದ್ದೇನೆ,ಅವರು ನಮ್ಮ ಜೊತೆ ಇರೋ ವಿಶ್ವಾಸವಿದೆ. ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ, ಮಾಧುಸ್ವಾಮಿ ಜೊತೆ ನಾನು ಮಾತನಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.