ಮೈಸೂರು: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನಪರ ಕೆಲಸಗಳನ್ನು ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದರು. ಈಗ ವಿರೋಧ ಪಕ್ಷದ ಸ್ಥಾನದಲ್ಲ ಕುಳಿತು ಕೇವಲ ಪ್ರತಿಭಟನೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿನ ವಿವಾದಗಳು ಹಾಗೂ ವಿರೋಧ ಪಕ್ಷದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.ಆರೋಗ್ಯ ಇಲಾಖೆಯ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆ ಬಳಕೆ ಕುರಿತಾದ ವಿವಾದದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಈಗ ಸಣ್ಣ ವಿಷಯಗಳನ್ನೇ ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ಲೇವಡಿ ಮಾಡಿದರು.
ಉದ್ಯೋಗ ಸೃಷ್ಟಿ ಕುರಿತು ವಾಗ್ದಾಳಿ:
ಧಾರವಾಡದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮೋದಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಅದು ಈಡೇರಲಿಲ್ಲ. ರಾಜ್ಯದಲ್ಲೂ ಬಿಜೆಪಿ ಆಡಳಿತವಿದ್ದಾಗ ಯುವಕರಿಗೆ ಉದ್ಯೋಗ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿತ್ತು. ಹೀಗಿರುವಾಗ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕ ಹಕ್ಕು ಅವರಿಗಿಲ್ಲ ಎಂದು ಕಿಡಿಕಾರಿದರು.
ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ:
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ನೀಡಿದ ಸಿದ್ದರಾಮಯ್ಯ, “ಒಳಮೀಸಲಾತಿ ಕಾರಣದಿಂದ ನೇಮಕಾತಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದೆ. ಆದರೆ ಶೀಘ್ರದಲ್ಲೇ ಹಂತ ಹಂತವಾಗಿ ನೇಮಕಾತಿ ಆರಂಭಿಸಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆಯಲಿದ್ದು, ಈ ಕುರಿತು ಬಜೆಟ್ನಲ್ಲಿಯೂ ಸ್ಪಷ್ಟ ಘೋಷಣೆ ಮಾಡಲಾಗುವುದು” ಎಂದು ತಿಳಿಸಿದರು.

