ಬೆಂಗಳೂರು: ಸಿಲಿಕಾನ್ ಸಿಟಿಯ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿಯ ಚೆಕ್ ಪೋಸ್ಟ್ ಸಮೀಪ ಇಂದು (ಅಕ್ಟೋಬರ್ 31) ಮುಂಜಾನೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ವಿವರ:
ಹೂಡಿಯಿಂದ ಕೆ.ಆರ್. ಮಾರ್ಕೆಟ್‌ಗೆ ಸಂಚರಿಸುತ್ತಿದ್ದ ಡಿಪೋ-15ಕ್ಕೆ ಸೇರಿದ ಬಿಎಂಟಿಸಿ ಬಸ್ (ನೊಂದಣಿ ಸಂಖ್ಯೆ: KA-57-F-3291, ರೂಟ್ ನಂ. 344C/2) ಬೆಳಿಗ್ಗೆ ಸುಮಾರು 9:15ರ ವೇಳೆಗೆ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆ ಹತ್ತಿರ ತಲುಪಿದಾಗ ಬಸ್ಸಿನ ಒಳಗೆ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆ ಬದಿಗೆ ಸುರಕ್ಷಿತವಾಗಿ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ.
ಬಳಿಕ ಚಾಲಕ ಮತ್ತು ನಿರ್ವಾಹಕ ಸೇರಿ ಬಸ್ಸಿನಲ್ಲಿದ್ದ ಅಗ್ನಿಶಾಮಕ ಉಪಕರಣದ (Fire Extinguisher) ಮೂಲಕ ಬೆಂಕಿ ನಂದಿಸಲು ಪ್ರಯತ್ನಿಸುವುದರ ಜೊತೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ಹದೋಟಿಗೆ ತಂದಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಶಂಕೆ:
ಬಿಎಂಟಿಸಿಯ ಯಾಂತ್ರಿಕ ಎಂಜಿನಿಯರಿಂಗ್ ವಿಭಾಗದ ಪ್ರಾಥಮಿಕ ತನಿಖೆಯ ಪ್ರಕಾರ, ಎಲೆಕ್ಟ್ರಿಕಲ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ತಜ್ಞರಿಂದ ಜಂಟಿ ಪರಿಶೀಲನೆ:
ಈ ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಅಧಿಕಾರಿಗಳು ಬಸ್ ತಯಾರಕ ಕಂಪನಿಯಾದ ‘ಐಷರ್’ (Eicher) ಸಂಸ್ಥೆಯನ್ನು ಸಂಪರ್ಕಿಸಿದ್ದಾರೆ. ನವೆಂಬರ್ 2ರ ಸೋಮವಾರದಂದು ಐಷರ್ ತಾಂತ್ರಿಕ ತಂಡ ಮತ್ತು ಬಿಎಂಟಿಸಿ ಎಂಜಿನಿಯರಿಂಗ್ ತಂಡ ಜಂಟಿಯಾಗಿ ತಾಂತ್ರಿಕ ತಪಾಸಣೆ ನಡೆಸಲಿವೆ. ಈ ಪರಿಶೀಲನೆಯ ನಂತರವೇ ತಾಂತ್ರಿಕ ದೋಷಗಳ ಬಗ್ಗೆ ನಿಖರ ಮಾಹಿತಿ ಸಿಗಲಿದ್ದು, ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಸಂಸ್ಥೆ ಮೊದಲ ಆದ್ಯತೆ ನೀಡುತ್ತದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

