Sat. Nov 14th, 2026

ಜಿ.ಪಂ, ತಾ.ಪಂ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕ ಹೋರಾಟಕ್ಕೆ ಬಿಜೆಪಿ ನಿರ್ಧಾರ: ಬಿ.ವೈ. ವಿಜಯೇಂದ್ರ

Share this with Friends

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಕಾರ್ಯಕರ್ತರ ಚುನಾವಣೆ ಎಂದೇ ಕರೆಯಲ್ಪಡುವ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ರಮಡಾ ರೆಸಾರ್ಟ್‌ನಲ್ಲಿ ಶನಿವಾರ (ನವೆಂಬರ್ 14) ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಪ್ರಮುಖರ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಸಹ ಉಸ್ತುವಾರಿ ಕಾಸಂ ವೆಂಕಟೇಶ್ವರಲು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

ರಾಜ್ಯವ್ಯಾಪಿ ಪ್ರವಾಸ ಹಾಗೂ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ:

ಸಭೆಯ ನಿರ್ಣಯಗಳ ಕುರಿತು ಮಾಹಿತಿ ಹಂಚಿಕೊಂಡಿರುವ ಬಿ.ವೈ. ವಿಜಯೇಂದ್ರ, ಚುನಾವಣಾ ಸಿದ್ಧತೆಗಾಗಿ ಪಕ್ಷದ ಎಲ್ಲಾ ಪ್ರಮುಖ ನಾಯಕರು ರಾಜ್ಯದ ಪ್ರತಿಯೊಂದು ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿವರಿಸಿದ್ದಾರೆ.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳು:

ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ: ಹಾಲು, ಸ್ಟಾಂಪ್ ಪೇಪರ್, ಸರ್ಕಾರಿ ಬಸ್ ಪ್ರಯಾಣ ದರ, ಪೆಟ್ರೋಲ್-ಡೀಸೆಲ್ ಸುಂಕ ಹಾಗೂ ಮದ್ಯದ ದರ ಹೆಚ್ಚಳದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಿಷ್ಕ್ರಿಯವಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಹಾಗೂ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಆರೋಪಗಳು ಸಭೆಯಲ್ಲಿ ಚರ್ಚೆಯಾದವು.

ಬರ ನಿರ್ವಹಣೆ ಹಾಗೂ ಪಿಂಚಣಿ ವಿಳಂಬ: ಬರಗಾಲದಿಂದ ರೈತರು ಮತ್ತು ಜಾನುವಾರುಗಳು ಸಂಕಷ್ಟದಲ್ಲಿದ್ದರೂ ಸರ್ಕಾರ ಬರ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಅಲ್ಲದೆ ವಿಧವಾ ಮಾಸಾಶನ ಮತ್ತು ಹಿರಿಯ ನಾಗರಿಕರ ಪಿಂಚಣಿಯನ್ನು ಕಳೆದ ಕೆಲವು ತಿಂಗಳುಗಳಿಂದ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಮಟ್ಟದಲ್ಲಿ ಜನಜಾಗೃತಿ: ತೀವ್ರ ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಎಲ್ಲಾ ತಾಲ್ಲೂಕುಗಳಲ್ಲೂ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 


Share this with Friends

Related Post