ಬೆಂಗಳೂರು: ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಎನ್‌ಡಿಎ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದಕ್ಕಿಂತ ನಾವು ಹೇಗೆ ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ವಿಶಿಷ್ಟ ರಣತಂತ್ರ ರೂಪಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಹಾಗೂ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದ ಸದ್ಯದ ವಿದ್ಯಮಾನಗಳು ಹಾಗೂ ಪಕ್ಷದ ಮುಂದಿನ ಹೋರಾಟದ ಹಾದಿಯ ಕುರಿತು ವಿಸ್ತಾರವಾಗಿ ಮಾತನಾಡಿದರು.
ಕಾಂಗ್ರೆಸ್ ಮುಖಂಡರ ಆರ್ಭಟಕ್ಕೆ ಜನ ಮರಳಾಗಲ್ಲ:
ಹಿರಿಯೂರು ಉಪಚುನಾವಣೆ ಯಾವ ಕ್ಷಣದಲ್ಲಾದರೂ ಘೋಷಣೆಯಾಗಬಹುದು. ಈ ನಿಟ್ಟಿನಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಸದ್ಯದಲ್ಲೇ ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಇತ್ತೀಚಿನ ವಿಧಾನ ಪರಿಷತ್ ಚುನಾವಣೆ ಫಲಿತಾಂಶವು ಆಡಳಿತ ಪಕ್ಷದ ವಿರುದ್ಧದ ಜನಾಕ್ರೋಶಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಕಳೆದ ಎರಡು-ಮೂರು ತಿಂಗಳಿಂದ ಹಿರಿಯೂರು ಭಾಗದಲ್ಲಿ ಎಷ್ಟೇ ಆರ್ಭಟ ನಡೆಸಿದ್ದರೂ, ರಾಜ್ಯದ ಜನತೆ ಈ ಭ್ರಷ್ಟ ಸರ್ಕಾರದ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ರಾಜ್ಯ ಬಿಜೆಪಿ ಸಂಘಟನೆಗೆ ದ್ವಿವೇದಿ ಶಕ್ತಿ:
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಅವರ ಉಪಸ್ಥಿತಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ, ಮುಂಬರುವ ಜಿಬಿಎ, ಜಿಲ್ಲಾ ಪಂಚಾಯಿತಿ, ಗ್ರಾಪಂ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಕುರಿತು ಸವಿಸ್ತಾರವಾದ ಮಾರ್ಗದರ್ಶನ ದೊರೆತಿದೆ. ಅಪಾರ ರಾಜಕೀಯ ಅನುಭವ ಹೊಂದಿರುವ ದ್ವಿವೇದಿ ಅವರು ಕರ್ನಾಟಕಕ್ಕೆ ಹೆಚ್ಚು ಸಮಯ ನೀಡುವುದಾಗಿ ತಿಳಿಸಿದ್ದು, ಇದು ಪಕ್ಷಕ್ಕೆ ಆನೆಬಲ ತಂದಿದೆ ಎಂದರು.
‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನ:
ಕೇಂದ್ರದಲ್ಲಿ ಪ್ರಜಾಸತ್ತಾತ್ಮಕವಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಹತಾಶರಾಗಿ ಕುತಂತ್ರ ರೂಪಿಸುತ್ತಿದ್ದಾರೆ. ಇದರ ವಿರುದ್ಧ ದೇಶಾದ್ಯಂತ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಕೋಲಾರದಲ್ಲಿ ಬೆಳಿಗ್ಗೆ 11 ಗಂಟೆಗೆ ಬೃಹತ್ ಪಾದಯಾತ್ರೆ ಆರಂಭವಾಗಲಿದ್ದು, 10 ಸಾವಿರಕ್ಕೂ ಹೆಚ್ಚು ಯುವಕರು ಪಾಲ್ಗೊಳ್ಳಲಿದ್ದಾರೆ. ನಾಡಿದ್ದು ಚಿತ್ರದುರ್ಗದಲ್ಲೂ ಈ ಪಾದಯಾತ್ರೆ ಮುಂದುವರಿಯಲಿದೆ ಎಂದು ವಿವರಿಸಿದರು.
ಕಾಂಗ್ರೆಸ್‌ನಲ್ಲಿ ಶೀಘ್ರದಲ್ಲೇ ಆಂತರಿಕ ಸ್ಫೋಟ:
ರಾಜ್ಯ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ತಾರಕಕ್ಕೇರಿದೆ. ಮೂರನೇ ಮುಖ್ಯಮಂತ್ರಿಯನ್ನು ತರಲು ತೆರೆಮರೆಯಲ್ಲಿ ಭಾರಿ ಕಸರತ್ತುಗಳು ಮತ್ತು ಗೌಪ್ಯ ಸಭೆಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದೆಹಲಿಗೆ ತೆರಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ ಎನ್ನುವ ಖಚಿತ ಮಾಹಿತಿ ಲಭ್ಯವಾಗಿದೆ. ಆಡಳಿತ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ, ಯಾವುದೇ ಕ್ಷಣದಲ್ಲಾದರೂ ಈ ಆಂತರಿಕ ಬೇಗುದಿ ಸ್ಫೋಟಗೊಳ್ಳುವ ಮುನ್ಸೂಚನೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು.

