Fri. Jun 5th, 2026

ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ ಭವಿಷ್ಯ!

Share this with Friends

ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡಲು ಸಂಪೂರ್ಣವಾಗಿ ಸೋತಿದೆ ಎಂಬುದನ್ನು ಸ್ವತಃ ಕಾಂಗ್ರೆಸ್ ನಾಯಕರೇ ಒಪ್ಪಿಕೊಂಡಂತಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಥಾನ್ ಸಭೆಗಳ ಬಳಿಕ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲು ಹೈಕಮಾಂಡ್ ನಿರ್ಧರಿಸಿದೆ. ಇದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪತನದ ಆರಂಭವನ್ನು ಸೂಚಿಸುತ್ತಿದೆ ಎಂದರು.

ತಾತ್ಕಾಲಿಕ ಸಿಎಂ, ಅವಧಿಪೂರ್ವ ಚುನಾವಣೆ:

ಸಿದ್ದರಾಮಯ್ಯನವರ ನಿರ್ಗಮನದ ಬಳಿಕ ಮುಖ್ಯಮಂತ್ರಿ ಗದ್ದುಗೆಗೆ ಯಾರು ಬಂದರೂ ಅದು ಕೇವಲ ತಾತ್ಕಾಲಿಕ ವ್ಯವಸ್ಥೆಯಷ್ಟೇ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಎದುರಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿದ ತಕ್ಷಣ ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದ ಗೊಂದಲಗಳು ಸೃಷ್ಟಿಯಾಗಲಿವೆ. ಹೈಕಮಾಂಡ್ ಸೂಚನೆ ನೀಡಿರುವುದರಿಂದ ಸಿಎಂ ರಾಜೀನಾಮೆ ನೀಡುವುದು ಗ್ಯಾರಂಟಿ, ಆದರೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ದೇವರಿಗೇ ಗೊತ್ತು ಎಂದು ವ್ಯಂಗ್ಯವಾಡಿದರು.

ಸಾಲದ ಸುಳಿಗೆ ಸಿಲುಕಿದ ರಾಜ್ಯ:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತಮಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ, ಅವರು ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ರಾಜಕೀಯ ಅನುಭವ ಹೊಂದಿರುವ ನಾಯಕರಲ್ಲಿ ಒಬ್ಬರು. ಆದರೆ, ಅವರ ಅಧಿಕಾರಾವಧಿಯಲ್ಲಿ ಕರ್ನಾಟಕವು ಸುಮಾರು 10 ಲಕ್ಷ ಕೋಟಿ ರೂಪಾಯಿಗಳ ಭಾರಿ ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ಆರ್ಥಿಕ ಸ್ಥಿತಿಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು.

ಆಡಳಿತ ಕುಸಿತ, ಹಗರಣಗಳೇ ಕಾಂಗ್ರೆಸ್ ಪತನಕ್ಕೆ ಕಾರಣ: 

“ರಾಜ್ಯದಲ್ಲಿ ಯಾರು ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದಕ್ಕಿಂತ, ಕರ್ನಾಟಕ ಪ್ರಸ್ತುತ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂದು ಇಡೀ ಜನತೆ ಆತಂಕದಿಂದ ಯೋಚಿಸುವಂತಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಹಾಗೂ ಸಾಲದ ಸುಳಿಯಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎಂದು ಅವರು ದೂರಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಅವಧಿಯಲ್ಲಿ ನಡೆದ ಸಾಲು ಸಾಲು ಭ್ರಷ್ಟಾಚಾರದ ಪ್ರಕರಣಗಳನ್ನು ಪಟ್ಟಿ ಮಾಡಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ಮುಡಾ (MUDA) ನಿವೇಶನ ಹಗರಣಗಳೇ ಇದಕ್ಕೆ ನೇರ ಸಾಕ್ಷಿ. ಸರ್ಕಾರದ ಭ್ರಷ್ಟ ನೀತಿ ಹಾಗೂ ಒತ್ತಡ ತಾಳಲಾರದೆ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಸ್ಥಿತಿ ನಿರ್ಮಾಣವಾಗಿತ್ತು ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಉಪಚುನಾವಣೆ ಗೆಲುವು ಮಾನದಂಡವಲ್ಲ:

ಇತ್ತೀಚಿನ ಉಪಚುನಾವಣೆಗಳ ಗೆಲುವನ್ನು ಮುಂದಿಟ್ಟುಕೊಂಡು ಸರ್ಕಾರವು ತನ್ನ ಆಡಳಿತವನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. “ಒಂದು ವೇಳೆ ಉಪಚುನಾವಣೆಯ ಫಲಿತಾಂಶವೇ ಸರ್ಕಾರದ ಯಶಸ್ಸಿಗೆ ಮಾನದಂಡವಾಗಿದ್ದರೆ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿ ಖಂಡಿತಾ ಬರುತ್ತಿರಲಿಲ್ಲ” ಎಂದು ಅವರು ತಿರುಗೇಟು ನೀಡಿದರು.

ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾರಣಕ್ಕಾಗಿಯೇ ಹೈಕಮಾಂಡ್ ಈಗ ಅನಿವಾರ್ಯವಾಗಿ ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರಕ್ಕೆ ಬಂದಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದ್ದಾರೆ

 

 


Share this with Friends

Related Post