Fri. Mar 6th, 2026

ಪಡುಬಿದ್ರೆ-ಎರ್ಮಾಳು ವಿಮಾನ ನಿಲ್ದಾಣಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಸಹಕಾರಕ್ಕೆ ಸಂಸದ ಕೋಟಾ ಮನವಿ

Share this with Friends

ಉಡುಪಿ: ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣ ಸ್ಥಾಪಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಸರ್ಕಾರವು ಸೂಕ್ತ ಸಹಕಾರ ಮತ್ತು ಪ್ರಸ್ತಾವನೆ ಸಲ್ಲಿಸಿದರೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸಿದ್ಧವಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಶೇಷ ವಿನಂತಿಯ ಮೇರೆಗೆ ಕೇಂದ್ರ ವಿಮಾನಯಾನ ಸಚಿವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆ ಇದಕ್ಕೆ ಪತ್ರದ ಮೂಲಕ ಉತ್ತರಿಸಿರುವ ಸಚಿವರು, “ಕೇಂದ್ರದ ‘ಉಡಾನ್’ ಯೋಜನೆಯಡಿ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡಲಾಗುವುದು. ಆದರೆ, ರಾಜ್ಯ ಸರ್ಕಾರವು ಮೊದಲು ಸೂಕ್ತ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯಸಾಧ್ಯತೆಯ ವರದಿ (Feasibility Study) ಸಿದ್ಧಪಡಿಸಿ ಕೇಂದ್ರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಬೇಕು,” ಎಂದು ಸೂಚಿಸಿದ್ದಾರೆ ಎಂದು ತಿಳಿಸಿದರು.

ಗ್ರೀನ್ ಫೀಲ್ಡ್ ನೀತಿಯಡಿ ಅಭಿವೃದ್ಧಿ:

ಭಾರತ ಸರ್ಕಾರದ ‘ಗ್ರೀನ್ ಫೀಲ್ಡ್’ ವಿಮಾನ ನಿಲ್ದಾಣ ನೀತಿಯಡಿ ಈ ಯೋಜನೆಗೆ ಬೇಕಾದ ಅಗತ್ಯ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು ಕೇಂದ್ರ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ಬಲ ಸಿಗಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರದ ಗಮನಕ್ಕೆ:

“ನನ್ನ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವರಿಗೆ ಧನ್ಯವಾದಗಳು. ರಾಜ್ಯ ಸರ್ಕಾರವು ಸ್ಥಳ ಪರಿಶೀಲನೆ ನಡೆಸಿ ಶೀಘ್ರವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಗಮನ ಸೆಳೆಯಲಾಗುವುದು,” ಎಂದು ಕೋಟಾ ಶ್ರೀನಿವಾಸ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 


Share this with Friends

Related Post