ರಾಮನಗರ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರವು ಮಾಸಿಕ 1,500 ರೂ. ಗೌರವಧನ ಹೆಚ್ಚಿಸಲು ಸಿದ್ಧತೆ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ರಾಮನಗರದ ಜಿಲ್ಲಾ ಪಂಚಾಯಿತಿ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,500 ರೂ. ಹೆಚ್ಚಳ ಮಾಡುವ ಕುರಿತು ಈಗಾಗಲೇ ಕರಡು ಪ್ರಸ್ತಾವ ಸಿದ್ಧಪಡಿಸಲಾಗಿದೆ. ಈ ಕುರಿತು ತಾವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ನಿರ್ದೇಶಕರೊಂದಿಗೆ ಚರ್ಚಿಸಿದ್ದು, ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಮನವಿ ಮಾಡಿರುವುದಾಗಿ ಹೇಳಿದರು. ಹಣಕಾಸು ಸಚಿವಾಲಯದ ಅನುಮೋದನೆಯೊಂದಿಗೆ ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇದನ್ನು ಮಂಡಿಸಿ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಸರ್ಕಾರವೂ ಸ್ಪಂದಿಸಲಿ:
“ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೆ ಹಗಲಿರುಳು ತಳಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಆಶಾ ಕಾರ್ಯಕರ್ತೆಯರು ಇಂದು ಬೀದಿಗಿಳಿದಿದ್ದಾರೆ. ಅವರ ಬೇಡಿಕೆಗಳು ಅತ್ಯಂತ ಸಮಂಜಸವಾಗಿವೆ. ಪ್ರಸ್ತುತ ರಾಜ್ಯ ಸರ್ಕಾರ 5,000 ರೂ. ಹಾಗೂ ಕೇಂದ್ರ ಸರ್ಕಾರ 2,000 ರೂ. ಗೌರವಧನ ನೀಡುತ್ತಿದೆ. ಕಾರ್ಯಕರ್ತೆಯರು ಗೌರವಯುತ ಬದುಕು ನಡೆಸಲು ಕೇಂದ್ರದ ಜೊತೆಗೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು” ಎಂದು ಡಾ. ಮಂಜುನಾಥ್ ಒತ್ತಾಯಿಸಿದರು.
ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ:
ಇದೇ ವೇಳೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಸ್ತಾಪಿಸಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಸದರು, ಕೇವಲ ಅನುದಾನ ನೀಡಿದರೆ ಸಾಲದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ರಾಜ್ಯದ ಒಟ್ಟು ಆದಾಯದ ಶೇ. 40ರಷ್ಟು ಪಾಲು ಬೆಂಗಳೂರಿನಿಂದಲೇ ಬರುತ್ತದೆ. ಪ್ರತ್ಯೇಕ ರಾಜ್ಯವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ಬರುತ್ತದೆ? ಅಧಿಕಾರವಿದ್ದಾಗ ಸರಿಯಾಗಿ ಕೆಲಸ ಮಾಡಿದರೆ ಇಂತಹ ಪ್ರತ್ಯೇಕತಾ ಭಾವನೆ ಮೂಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.

