ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ನಾಲ್ವರ ಕುಟುಂಂಬಕ್ಕೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ.ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಅಪಘಾತ ಪ್ರಕರಣ:
ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಾದವರನ್ನ ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು. ನರಸಿಂಹಮೂರ್ತಿ ಹಾಗೂ ನಂದೀಶ್ ಅಣ್ಣತಮ್ಮಂದಿರು. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

