Sat. Nov 14th, 2026

ಸಂಸತ್ತು, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

Share this with Friends

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಮುಂಬರುವ ಸಂಸತ್ ಅಧಿವೇಶನದಲ್ಲಿ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬರುವ ವಿಶ್ವಾಸವಿದ್ದು, ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನವೆಂಬರ್ 17 ಮತ್ತು 18ರಂದು ನಡೆಯಲಿರುವ ‘ಕಾಮನ್ವೆಲ್ತ್ ಮಹಿಳಾ ಸಂಸದರ’ (CWP) ಭಾರತೀಯ ಪ್ರಾದೇಶಿಕ ಸಮ್ಮೇಳನದ ಲೋಗೋವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶನಿವಾರ ಅನಾವರಣಗೊಳಿಸಿ ಅವರು ಮಾತನಾಡಿದರು. ಈ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಿದ್ದರು. ಪ್ರಸ್ತುತ ಎಲ್ಲಾ ರಾಜಕೀಯ ಪಕ್ಷಗಳೂ ಮಹಿಳಾ ಮೀಸಲಾತಿ ಪರವಾಗಿವೆ ಎಂದರು.

ಆಡಳಿತದ ಆಯಕಟ್ಟಿನ ಹುದ್ದೆಗಳಲ್ಲಿ ಮಹಿಳೆಯರೇ ಮೇಲುಗೈ:

ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರ ಪ್ರಾಬಲ್ಯ ಸಂತಸದ ವಿಚಾರವಾಗಿದೆ ಎಂದು ಶ್ಲಾಘಿಸಿದ ಸಿಎಂ, “ರಾಜ್ಯದ ರಾಜ್ಯಪಾಲರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯದರ್ಶಿಗಳು ಮತ್ತು ಉಪಸಭಾಪತಿ ಸ್ಥಾನಗಳಲ್ಲಿ ಮಹಿಳೆಯರೇ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣಾಗಿದ್ದು, ಮಹಿಳೆ ಸಬಲಳಾದರೆ ಸಮಾಜವೂ ಸಬಲವಾಗುತ್ತದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಡಬ್ಲ್ಯೂಪಿ ಸಮ್ಮೇಳನ ಐತಿಹಾಸಿಕ ಮೈಲಿಗಲ್ಲು:

ಸಿಡಬ್ಲ್ಯೂಪಿ ಭಾರತ ವಲಯದ ಅಧ್ಯಕ್ಷೆ ಡಿ. ಪುರಂದೇಶ್ವರಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಈ ಮೊಟ್ಟಮೊದಲ ಸ್ವತಂತ್ರ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ವಿಧಾನಸಭಾ ಸ್ಪೀಕರ್ ಜಿ.ಎಸ್. ಪಾಟೀಲ್ ಮತ್ತು ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಸಹಕಾರದೊಂದಿಗೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶ-ವಿದೇಶಗಳ 150ಕ್ಕೂ ಹೆಚ್ಚು ಮಹಿಳಾ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ದೇಶದ ಮೊದಲ ಮಹಿಳಾ ಮುಖ್ಯಮಂತ್ರಿ ಸುಚೇತಾ ಕೃಪಲಾನಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕೊಡುಗೆಗಳನ್ನು ಸ್ಮರಿಸಿದ ಶಿವಕುಮಾರ್, ಮಹಿಳೆಯರು ಮನಸ್ಸು ಮಾಡಿದರೆ ಎಂತಹ ಸಾಧನೆಯನ್ನಾದರೂ ಮಾಡಬಲ್ಲರು ಎಂದರು.

 


Share this with Friends

Related Post