Thu. Nov 12th, 2026

ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಸುಪ್ರೀಂನಲ್ಲಿ ಮೇಲ್ಮನವಿ: ಸಿಎಂ ಡಿ.ಕೆ. ಶಿವಕುಮಾರ್

Share this with Friends

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವಂತೆ ಕೋರಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು ಹಾಗೂ ಅವಕಾಶ ಸಿಕ್ಕರೆ ಖುದ್ದು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ‘ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್’ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಹಾಗೂ ಒಳಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಅರ್ಜಿ ಸ್ವೀಕೃತವಾಗಿದೆ. ಈ ಕಾನೂನು ಹೋರಾಟದ ಮೇಲ್ವಿಚಾರಣೆಗೆ ಡಿಸಿಎಂ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಹೆಚ್. ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಸಾಮಾಜಿಕ ಆಡಿಟ್:

ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ 34 ಇಲಾಖೆಗಳ 451 ಯೋಜನೆಗಳಿಗೆ 44,631 ಕೋಟಿ ಹಂಚಿಕೆ ಮಾಡಲಾಗಿದೆ. ಈ ಅನುದಾನದ ಬಳಕೆ ಮತ್ತು ಪರಿಣಾಮವನ್ನು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ (Social Audit) ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಅನುದಾನ ಹಂಚಿಕೆಯಲ್ಲಿ ಬದಲಾವಣೆ ಅಗತ್ಯವಿದ್ದರೆ ಪರಿಶೀಲಿಸಲು ಪರಮೇಶ್ವರ್ ನೇತೃತ್ವದ ಸಮಿತಿ ಎರಡು ದಿನಗಳ ಕಾಲ ಎಸ್‌ಸಿ, ಎಸ್‌ಟಿ ಶಾಸಕರೊಂದಿಗೆ ಚರ್ಚಿಸಿ ವರದಿ ನೀಡಲಿದೆ ಎಂದು ಸಿಎಂ ವಿವರಿಸಿದರು.

ಬಾಕಿ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಪತ್ರ:

ಕೇಂದ್ರ ಪುರಸ್ಕೃತ ಯೋಜನೆಗಳಡಿ 2025-26ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ತನ್ನ ಪಾಲಿನ 1,937 ಕೋಟಿ ಅನುದಾನವನ್ನು ಬಾಕಿ ಉಳಿಸಿಕೊಂಡಿದ್ದು, ಇದನ್ನು ಶೀಘ್ರ ಬಿಡುಗಡೆ ಮಾಡುವಂತೆ ಪತ್ರ ಬರೆಯಲಾಗುವುದು. ಕೇಂದ್ರದ ಹಣ ಬಾರದಿದ್ದರೂ, ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆಯಾಗದಂತೆ ರಾಜ್ಯದ ಪಾಲಿನ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ ಎಂದರು.

ಸಭೆಯ ಇತರ ಪ್ರಮುಖ ತೀರ್ಮಾನಗಳು:

ಬ್ಯಾಕ್‌ಲಾಗ್ ಹುದ್ದೆ ಭರ್ತಿ: ಬಾಕಿ ಉಳಿದಿರುವ 1,574 ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಪಾರದರ್ಶಕತೆಗೆ ಒತ್ತು: ಫಲಾನುಭವಿಗಳ ಫೋಟೋ ಮತ್ತು ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಕಚೇರಿ ವೆಚ್ಚಕ್ಕೆ ಬಳಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಮವಸ್ತ್ರಕ್ಕೆ ಹೊಸ ರೂಪ ಮತ್ತು ಐಕ್ಯತಾ ಸಮಾವೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳ ಮಾದರಿಯಲ್ಲಿ ಉತ್ತಮ ಗುಣಮಟ್ಟದ ಸಮವಸ್ತ್ರ ನೀಡಲಾಗುವುದು. ಶೀಘ್ರದಲ್ಲೇ ಎಸ್‌ಸಿ, ಎಸ್‌ಟಿ ಐಕ್ಯತಾ ಸಮಾವೇಶ ಆಯೋಜಿಸಲಾಗುವುದು ಎಂದು ಸಿಎಂ ತಿಳಿಸಿದರು.

 

 


Share this with Friends

Related Post